ಮೈಸೂರು, ಆ. 27: ಅಂತರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ “ಮಾದಕ ದ್ರವ್ಯ ಮುಕ್ತ ಮೈಸೂರು (ನಶ ಮುಕ್ತ ಮೈಸೂರು, ಸಶಕ್ತ ಮೈಸೂರು)” ಎಂಬ ಘೋಷಣೆಯೊಂದಿಗೆ ಮೈಸೂರಿನಲ್ಲಿ ಜಾಗೃತಿ ಜಾಥಾ ಹಾಗೂ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು, ಮೈಸೂರು ನಗರ ಪೊಲೀಸ್, ಎನ್.ಆರ್. ಫೌಂಡೇಶನ್, ಮೈಸೂರು, ಎಂ.ಇ.ಎಸ್. ಪ್ರಥಮ ದರ್ಜೆ ಕಾಲೇಜು ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಮೈಸೂರು ಇವರ ಸಹಯೋಗದಲ್ಲಿ ಉದಯಗಿರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯಿತು.

ಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ನಾಗರಾಜ ಸಿದ್ದಪ್ಪ ಅಂಕಸದೊಡ್ಡಿ, ಪ್ರಸ್ತುತ ದೇಶದ ಯುವಜನತೆಯನ್ನು ಕಾಡುತ್ತಿರುವ ದೊಡ್ಡ ಸಾಮಾಜಿಕ ಸಮಸ್ಯೆಗಳಲ್ಲಿ ಮಾದಕ ದ್ರವ್ಯ ಸೇವನೆಯೂ ಒಂದಾಗಿದೆ ಎಂದು ಹೇಳಿದರು.
ಯುವಜನರು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತರಾಗಬೇಕು ಹಾಗೂ ಅದರಿಂದ ದೂರವಿದ್ದು ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಇಂತಹ ಜಾಗೃತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಚಾರವಾಗಿದೆ ಎಂದ ಅವರು, ಯುವಜನರು ಸಾಮಾಜಿಕ ಕಳಕಳಿಯಿಂದ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಮಾಜದಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಮಾದಕ ದ್ರವ್ಯದಂತಹ ಸಾಮಾಜಿಕ ಪಿಡುಗುಗಳಿಂದ ದೂರವಿದ್ದು, ಸಶಕ್ತ ದೇಶ ನಿರ್ಮಾಣಕ್ಕೆ ಯುವಜನರು ಮುಂದಾಗಬೇಕು. ಸರ್ಕಾರದ ಜೊತೆಗೆ ಸಮಾಜದ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಉದ್ದೇಶ ಹಾಗೂ ಸಂಸ್ಥೆಯ ಚಟುವಟಿಕೆಗಳ ಕುರಿತು ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸರಸ್ವತಿ ಪ್ರಸ್ತಾವಿಕವಾಗಿ ಮಾತನಾಡಿದರು. ಮೈಸೂರು ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.
ಜಾಗೃತಿ ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರದೀಪ್ ಕುಮಾರ್ ಅವರು ವಿಶೇಷ ಉಪನ್ಯಾಸ ನೀಡಿದರು. ಮಾದಕ ದ್ರವ್ಯ ತಡೆಗಟ್ಟುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದ ಅವರು, ಮಾದಕ ದ್ರವ್ಯಗಳಿಂದ ಹೇಗೆ ದೂರವಿರಬೇಕು, ಸಮಾಜದಲ್ಲಿ ಅದರ ಬಗ್ಗೆ ಹೇಗೆ ಜಾಗೃತಿ ಮೂಡಿಸಬೇಕು ಹಾಗೂ ತಮ್ಮ ಸುತ್ತಮುತ್ತಲಿನ ಯುವಜನರನ್ನು ಯಾವ ರೀತಿ ಜಾಗೃತಗೊಳಿಸಬೇಕು ಎಂಬ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ನಿರೀಕ್ಷಕರಾದ ಶ್ರೀ ಶಿವಕುಮಾರ್, ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸರಸ್ವತಿ, ಎಂ.ಇ.ಎಸ್. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸಫೀನಾ ಶಾನಾಜ್ ಎಂ. ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 140ಕ್ಕೂ ಹೆಚ್ಚು ಯುವಜನರು ಭಾಗವಹಿಸಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಮತ್ತು ಅದನ್ನು ತಡೆಗಟ್ಟುವ ಮಾರ್ಗಗಳ ಕುರಿತು ಮಾಹಿತಿ ಪಡೆದುಕೊಂಡರು. ಸಂಸ್ಥೆಯ ಸಿಬ್ಬಂದಿ ಹಾಗೂ ಕಾಲೇಜಿನ ಉಪನ್ಯಾಸಕರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಸ್ಥೆಯ ನ್ಯಾನ್ಸಿ ಅವರು ವಂದನಾರ್ಪಣೆ ಸಲ್ಲಿಸಿದರು. ಸಂಪತ್ ಕಟ್ಟಿ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂಬ ಸಂದೇಶದೊಂದಿಗೆ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j