Coronavirus: ಕೊರೊನಾ ಭೀತಿ ಹೆಚ್ಚುತ್ತಿದ್ದಂತೆ ಸರ್ಕಾರ ಹೈಅಲರ್ಟ್‌, 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ!

Covid Alert: ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರು: ಕೇರಳದಲ್ಲಿ ಮತ್ತೆ ಕೋವಿಡ್ ಸಾಂಕ್ರಾಮಿಕ ಕಾಯಿಲೆ (Coronavirus) ಭೀತಿ ಹುಟ್ಟಿಸಿರುವ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹೈ ಅಲರ್ಟ್ (High Alert) ಘೋಷಿಸಲಾಗಿದೆ.

ಅಯ್ಯಪ್ಪ ಮಾಲಾಧಾರಿಗಳು ಬೃಹತ್ ಸಂಖ್ಯೆಯಲ್ಲಿ ಕೇರಳದ ಶಬರಿಮಲೆಗೆ ವಿವಿಧ ರಾಜ್ಯಗಳಿಂದ, ವಿಶೇಷವಾಗಿ ಕರ್ನಾಟಕದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹೋಗುವದರಿಂದ ಕೊರೊನಾ ಸೋಂಕು ಹರಡುವ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆ ಅಯ್ಯಪ್ಪ ಭಕ್ತರ ಮೇಲೆ ಕರ್ನಾಟಕ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ವರ್ಷಾಂತ್ಯಕ್ಕೆ ಕೇರಳ ರಾಜ್ಯದಲ್ಲಿ ಕೊರೊನಾ ಕಂಟಕ ಭೀತಿ ಮತ್ತೆ ಶುರು ಆಗಿರೋದ್ರಿಂದ ಕರುನಾಡಿನಲ್ಲಿ ಫುಲ್ ಅಲರ್ಟ್ ಘೋಷಿಸಲಾಗಿದೆ.

ಈ ಹಿನ್ನೆಲೆ ನಾಳೆ (ಮಂಗಳವಾರ) ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸಭೆ ನಡೆಸಲಿದ್ದು, ತಾಂತ್ರಿಕ ಸಲಹಾ ಸಮಿತಿ ಸದ್ಯಸರ ಸಲಹೆ ಮೇರೆಗೆ ಮುಂದಿನ ಕ್ರಮದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಸೇರಿದಂತೆ ವರ್ಷಾಂತ್ಯದಲ್ಲಿ ಜನಸಾಗರ ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಕೊರೊನಾ ಕಟ್ಟಿಹಾಕಲು ತಾಂತ್ರಿಕ ಸಲಹಾ ಸಮಿತಿ ಸಭೆಯ ನಂತರ ರಾಜ್ಯದಲ್ಲಿ ಪ್ರತ್ಯೇಕ ಗೈಡ್ಲೈನ್ ಬಿಡುಗಡೆ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇನ್ನು ಕೊರೊನಾ ಸಾಂಕ್ರಾಮಿಕ ಕಾಯಿಲೆ ಹೆಚ್ಚುತ್ತಿರುವ ಹಿನ್ನೆಲೆ ಕೊಡಗಿನ ಕುಶಾಲನಗರದಲ್ಲಿ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್​.1 (JN.1) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ.

ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದ ಗುಂಡೂರಾವ್, ಕೊರೊನಾ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆ ಕೂಡ ಚರ್ಚೆ ಮಾಡಲಾಗಿದೆ ಎಂದರು.

ಹೆಚ್ಚು ಸೋಂಕು ಪತ್ತೆ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್​​ ಸಿದ್ಧವಾಗಿಡಲಾಗಿದೆ ಎಂದ ಅವರು, ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಟೆಸ್ಟ್​​ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರಷ್ಟೇ ನಿಷೇಧ, ನಿರ್ಬಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡುತ್ತೇವೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌, ಈ ಕೊರೊನಾ ರೂಪಾಂತರಿ ಎಷ್ಟರ ಮಟ್ಟಿಗೆ ಅಪಾಯಕಾರಿ ಇದೆ ಅನ್ನೋದು ಇನ್ನೂ ತಿಳಿದಿಲ್ಲ. ಸ್ಪಷ್ಟ ಮಾಹಿತಿ ಬರಬೇಕಾಗಿದೆ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. ರಾಜ್ಯದ ಮೆಡಿಕಲ್ ಕಾಲೇಜುಗಳಿಗೂ ಸೂಚನೆ ನೀಡಲಾಗಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಸನ್ನದ್ದವಾಗಿದೆ ಎಂದರು.

Source : https://kannada.news18.com/news/state/coronavirus-people-above-60-years-must-wear-mask-and-heart-related-problem-people-must-wear-a-mask-says-health-minister-dinesh-gundurao-akd-1490960.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *