ಮೃತರು ಚಿತ್ರದುರ್ಗ ಮೂಲದವರಾಗಿದ್ದು, ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ.

ಚಿಕ್ಕಮಗಳೂರು: ಲಾರಿಗೆ (Lorry) ಓಮ್ನಿ ಕಾರ್ ಡಿಕ್ಕಿ ,ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ (Chitradurga) ಮೂಲದ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓಮ್ನಿಯಲ್ಲಿದ್ದವರು ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಗಾಯಗೊಂಡವರನ್ನ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಓಮಿನಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗುರುತು ಸಿಗದಂತಾಗಿದೆ.
ಮೆಸ್ಕಾಂಗೆ ಸೇರಿದ ಲಾರಿಗೆ ಡಿಕ್ಕಿ
ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ವೇಗವಾಗಿ ಬಂದ ಓಮ್ನಿ ,ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಸೇರಿದ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾವನ್ನಪ್ಪಿರುವವರ ಗುರುತು ಇನ್ನೂ ಪತ್ತೆಯಾಗಿಲ್ಲ.