ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 35 ಸಾವಿರ ಮತ್ತು ಪ್ರೌಢಶಾಲೆಯಲ್ಲಿ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ.

ಪ್ರಸ್ತುತ ಪ್ರಾಥಮಿಕ ಶಾಲೆಯಲ್ಲಿ 33,863 ಮತ್ತು ಪ್ರೌಢಶಾಲೆಯಲ್ಲಿ 8,954 ಸೇರಿ 42,817 ಹುದ್ದೆಗಳು ಖಾಲಿ ಇವೆ. ಒಂದು ವೇಳೆ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿಯಾದಲ್ಲಿ ಅಥವಾ ಇನ್ನಿತರ ಕಾರಣಗಳಿಂದ ಅವಶ್ಯಕತೆಯಾದಲ್ಲಿ ನೇಮಕ ಮಾಡಿಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ 45 ಶಿಕ್ಷಕರ ನೇಮಕಾತಿ ಅನುಮತಿ ನೀಡಿದೆ.
2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೊ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ 35 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.ಖಾಲಿ ಇರುವ 33,863 ಹುದ್ದೆಗಳಿಗೆ ಮೊದಲ ಹಂತದಲ್ಲಿ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತಿಳಿಸಿದೆ.
ಪ್ರೌಢಶಾಲೆಗೆ 10 ಸಾವಿರ ಶಿಕ್ಷಕರು:
ಹಾಗೆಯೇ ಪ್ರೌಢಶಾಲೆಗೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಿದೆ. ಸದ್ಯ ಪ್ರೌಢಶಾಲೆಯಲ್ಲಿ 8,954 ವಿಷಯ ಶಿಕ್ಷಕರ ಕೊರತೆ ಇದೆ. ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೂ 8,954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಂತೆ ತಿಳಿಸಿದೆ.