ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ.

ನಟಿ, ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿಯೂ ಅಪರ್ಣಾ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಹಲವು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ರು. ಹಲವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಅಪರ್ಣಾ ಇಂದು(ಜುಲೈ 11) ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್ ನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ..

ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು. 90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಎಲ್ಲರನ್ನು ರಂಜಿಸಿದ್ರು.

2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದರು. ಅಪರ್ಣಾ ಧ್ವನಿ ಮೆಟ್ರೋ ಪ್ರಯಾಣಿಕರ ಕಿವಿ ಹಾಗೂ ಮನಸ್ಸು ತಟ್ಟಿತ್ತು. ಧ್ಬನಿ ಅಂದ್ರೆ ಅಪರ್ಣಾ ಅವರದ್ದೇ ಎಂದು ಜನ ಹೇಳ್ತಿದ್ರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು. ಅಚ್ಚಕನ್ನಡ ಮಾತಾಡುವ ನಿರೂಪಕಿ ಆಗಿ ಅಪರ್ಣಾ ಜನಪ್ರಿಯರಾಗಿದ್ರು. ತನ್ನ ಮಾತುಗಾರಿಕೆಯಿಂದಲೇ ಅಪರ್ಣ ಅಪಾರ ಅಭಿಮಾನಿಗಳನ್ನು ಗಳಿಸಿದ್ರು. ನಟಿ ನಿರೂಪಕಿ ಅಪರ್ಣಾ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Source : https://kannada.news18.com/photogallery/entertainment/cm-siddaramaiah-condoles-death-of-famous-anchor-aparna-pvn-1772331-page-8.html

Leave a Reply

Your email address will not be published. Required fields are marked *