ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
![](https://samagrasuddi.co.in/wp-content/uploads/2024/09/image-70-1024x576.png)
ಚಿತ್ತೂರು: ಆಂಧ್ರ ಪ್ರದೇಶದಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಸಾರಿಗೆ ಬಸ್ ಗೆ ಲಾರಿ ಢಿಕ್ಕಿಯಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೊಗಿಲಿ ಘಾಟ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲಮನೇರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಮೊಗಿಲಿ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ಅದೇ ರಸ್ತೆಯಲ್ಲಿ ಕಬ್ಬಿಣದ ಲೋಡ್ನೊಂದಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡು ವಾಹನಗಳು ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತದ ತೀವ್ರತೆ ಹೆಚ್ಚಿದೆ. ಈ ವೇಳೆ ಬಸ್ ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಎಲ್ಲ ಗಾಯಾಳುಗಳನ್ನು ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಿಎಂ ಚಂದ್ರಬಾಬು ನಾಯ್ಡು ಸಂತಾಪ
ಇನ್ನು ಮೊಗಲಿ ಘಾಟ್ ರಸ್ತೆ ಅಪಘಾತದ ವಿಚಾರವಾಗಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಅಂತೆಯೇ ಗಾಯಾಳುಗಳಿಗೆ ಎಲ್ಲ ರೀತಿಯ ವೈದ್ಯಕೀಯ ನೆರವು ನೀಡುವುದಾಗಿ ಘೋಷಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.