» ಕ.ಕರ್ನಾಟಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಂಜೂರಾತಿಗಾಗಿ ಖಾಲಿ ಇರುವ ಒಟ್ಟು 6,584 ಹುದ್ದೆಗಳ ಪೈಕಿ ಶೇ.80 ಹುದ್ದೆಗಳನ್ನು ಅಂದರೆ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿ ಕೊಳ್ಳಲು ಸರ್ಕಾರವು ಅನುಮತಿ ನೀಡಿ ಆದೇಶಿಸಿದೆ. ನೇಮಕಾತಿ ಪೂರ್ವ ಪ್ರಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಹುದ್ದೆಗಳಿಗೆ ತಗುಲಬಹುದಾದ ಆರ್ಥಿಕ ಆಯವ್ಯವವನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ನಡಾವಳಿ ಹೊರಡಿಸಿದ್ದಾರೆ.