IND vs NZ: ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು 114 ರನ್ಗಳಿಂದ ಗೆದ್ದುಕೊಂಡಿರುವ ನ್ಯೂಜಿಲೆಂಡ್ ತಂಡ ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ದಾಖಲೆ ನಿರ್ಮಿಸಿದೆ.
ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು 113 ರನ್ಗಳಿಂದ ಗೆದ್ದುಕೊಂಡಿರುವ ನ್ಯೂಜಿಲೆಂಡ್ ತಂಡ ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ದಾಖಲೆ ನಿರ್ಮಿಸಿದೆ. ವಾಸ್ತವವಾಗಿ 1955 ರಿಂದ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಮಾಡುತ್ತಿರುವ ನ್ಯೂಜಿಲೆಂಡ್ ತಂಡ, ಇದುವರೆಗೆ ಭಾರತದ ನೆಲದಲ್ಲಿ ಈ ಸರಣಿಯನ್ನು ಹೊರತುಪಡಿಸಿ 12 ಟೆಸ್ಟ್ ಸರಣಿಗಳನ್ನುನ ಆಡಿತ್ತು. ಆದರೆ ಈ ಯಾವ ಸರಣಿಯಲ್ಲೂ ಕಿವೀಸ್ ತಂಡ ಗೆಲ್ಲುವುದಕ್ಕೆ ಟೀಂ ಇಂಡಿಯಾ ಅವಕಾಶ ಮಾಡಿಕೊಟ್ಟಿರಲಿಲ್ಲ. ಆದರೀಗ ರೋಹಿತ್ ಪಡೆ ತವರಿನಲ್ಲಿ ಮೊದಲ ಬಾರಿಗೆ ಕಿವೀಸ್ ವಿರುದ್ಧ ಸೋತ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಈ ಮೊದಲು ಬೆಂಗಳೂರಿನಲ್ಲಿ ನಡೆದ ಟೆಸ್ಟ್ ಪಂದ್ಯವನ್ನು 8 ವಿಕೆಟ್ಗಳಿಂದ ಗೆದ್ದುಕೊಂಡಿದ್ದ ಕಿವೀಸ್ ತಂಡ, ಇದೀಗ ಎರಡನೇ ಟೆಸ್ಟ್ ಪಂದ್ಯವನ್ನು ಸುಲಭವಾಗಿ ಗೆದ್ದು ಭಾರತದ ನೆಲದಲ್ಲಿ ಇತಿಹಾಸ ನಿರ್ಮಿಸಿದೆ. ಇತ್ತ ಈ ಸೋಲಿನೊಂದಿಗೆ ತವರಿನಲ್ಲಿ ಟೀಂ ಇಂಡಿಯಾದ ಅಜೇಯ ಟೆಸ್ಟ್ ಸರಣಿಯ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.
ಭಾರತಕ್ಕೆ 359 ರನ್ ಗುರಿ
ಪುಣೆ ಟೆಸ್ಟ್ನ ಸೋಲಿಗೆ ಟೀಂ ಇಂಡಿಯಾದ ಕಳಪೆ ಬ್ಯಾಟಿಂಗ್ ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು. ಏಕೆಂದರೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಮೊದಲ ಇನ್ನಿಂಗ್ಸ್ನಲ್ಲಿ 259 ರನ್ ಕಲೆಹಾಕಿತು. ನಂತರ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಕೇವಲ 156 ರನ್ಗಳಿಗೆ ಆಲೌಟ್ ಆಯಿತು. ಹೀಗಾಗಿ 103 ರನ್ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ತಂಡ 255 ರನ್ಗಳಿಗೆ ಆಲೌಟ್ ಆಗುವ ಮೂಲಕ ಭಾರತಕ್ಕೆ 359 ರನ್ಗಳ ಗುರಿ ನೀಡಿತು.
ಬ್ಯಾಟಿಂಗ್ ವೈಫಲ್ಯ ಸೋಲಿಗೆ ಕಾರಣ
ಆದರೆ ಗುರಿ ಬೆನ್ನಟ್ಟಿದ ಟೀಂ ಇಂಡಿಯಾದ ಬ್ಯಾಟಿಂಗ್ ಮೊದಲ ಇನ್ನಿಂಗ್ಸ್ನಂತೆ ಎರಡನೇ ಇನ್ನಿಂಗ್ಸ್‌ನಲ್ಲೂ ಕೈಕೊಟ್ಟಿತು. ಹೀಗಾಗಿ ಇಡೀ ತಂಡ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 245 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ನಾಯಕ ರೋಹಿತ್ ಶರ್ಮಾ ಕೇವಲ 8 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಕೇವಲ 17 ರನ್ಗೆ ಸುಸ್ತಾದರು. ವಾಷಿಂಗ್ಟನ್ ಸುಂದರ್ 21 ರನ್ ಕೊಡುಗೆ ನೀಡಿದರೆ, ಇಲ್ಲದೆ ರನ್ ಕದಿಯಲು ಹೋದ ರಿಷಬ್ ಪಂತ್ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ತಂಡದ ಪರ ಗರಿಷ್ಠ ಇನ್ನಿಂಗ್ಸ್ ಆಡಿದ ರವೀಂದ್ರ ಜಡೇಜಾ 42 ರನ್ ಗಳಿಸಿದರೂ ತಂಡದ ಸೋಲನ್ನು ತಡೆಯಲು ಸಾಧ್ಯವಾಗಲಿಲ್ಲ.
ಮಿಂಚಿದ ಸ್ಯಾಂಟ್ನರ್
ನ್ಯೂಜಿಲೆಂಡ್ ಪರ ಎರಡನೇ ಇನ್ನಿಂಗ್ಸ್‌ನಲ್ಲೂ ಮಾರಕ ಬೌಲಿಂಗ್ ಪ್ರದರ್ಶಿಸಿದ ಮಿಚೆಲ್ ಸ್ಯಾಂಟ್ನರ್ ತಂಡದ ಗೆಲುವಿನ ಪ್ರಮುಖ ರೂವಾರಿ ಎನಿಸಿಕೊಂಡರು. ಮೊದಲ ಇನ್ನಿಂಗ್ಸ್ನಲ್ಲಿ ಪ್ರಮುಖ 7 ವಿಕೆಟ್ ಉರುಳಿಸಿದ್ದ ಸ್ಯಾಂಟ್ನರ್, ಎರಡನೇ ಇನ್ನಿಂಗ್ಸ್‌ನಲ್ಲೂ 6 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಕಿವೀಸ್ ತಂಡ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಭಾರತದಲ್ಲಿ ಚೊಚ್ಚಲ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿದೆ.