ನವದೆಹಲಿ, ಡಿಸೆಂಬರ್ 25:
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿ ಸಾವನ್ನಪ್ಪಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ಪ್ರತಿ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ₹50,000 ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರಧಾನಿ ಕಾರ್ಯಾಲಯ (PMO) ಎಕ್ಸ್ (X) ಮೂಲಕ ಮಾಹಿತಿ ಹಂಚಿಕೊಂಡಿದೆ.
“ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ತುಂಬಾ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಮುಂಜಾವ ಸುಮಾರು 3 ಗಂಟೆ ವೇಳೆಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ, ಎದುರು ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ಗೆ ಬೆಂಕಿ ಹೊತ್ತಿಕೊಂಡು, ಒಂಬತ್ತು ಮಂದಿ ಪ್ರಯಾಣಿಕರು ಸಜೀವ ದಹನವಾಗಿ ಮೃತಪಟ್ಟಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಮತ್ತು ಕ್ಲೀನರ್ ಪಾರಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಹಾಗೂ ತುಮಕೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಈ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ.
“ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ–ಬಸ್ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಸುದ್ದಿ ಎದೆ ನಡುಗಿಸಿದೆ. ಕ್ರಿಸ್‌ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ದುರಂತದಲ್ಲಿ ಕೊನೆಗೊಂಡಿರುವುದು ಅತ್ಯಂತ ವಿಷಾದನೀಯ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಮೃತರ ಕುಟುಂಬದ ದುಃಖದಲ್ಲಿ ನಾನೂ ಭಾಗಿ” ಎಂದು ಅವರು ಹೇಳಿದ್ದಾರೆ.
ಎಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸಂತಾಪ
ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು,
“ಇನ್ನಷ್ಟು ಸಾವು-ನೋವು ಸಂಭವಿಸದಿರಲಿ. ಮೃತರಿಗೆ ದೇವರು ಚಿರಶಾಂತಿ ಕರುಣಿಸಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಅವರ ಚಿಕಿತ್ಸೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಲಿ” ಎಂದು ತಿಳಿಸಿದ್ದಾರೆ.
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಸಂತಾಪ ಸೂಚಿಸಿ,
“ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಇಂತಹ ಭೀಕರ ದುರಂತಗಳು ಮರುಕಳಿಸದಿರಲಿ” ಎಂದು ಹೇಳಿದ್ದಾರೆ.
Views: 71