ಚಿತ್ರದುರ್ಗ:
ಚಿತ್ರಕಲಾ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಯನ್ನು ಗುರುತಿಸಿ ಚಿತ್ರದುರ್ಗದ ಖ್ಯಾತ ಚಿತ್ರ ಕಲಾವಿದ ಟಿ.ಎಂ. ವೀರೇಶ್ ಅವರಿಗೆ ವಿಶ್ವ ಮಾನವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಸೀಬಾರದ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 29, 2025 ರಂದು ಸೀಬಾರಾ ಶಾಲಾ ಆವರಣದಲ್ಲಿ ನಡೆಯಲಿರುವ ಕುವೆಂಪು ಜನ್ಮದಿನಾಚರಣೆ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು.
ಈ ಸಮಾರಂಭದಲ್ಲಿ ಹೆಸರಾಂತ ಉಪನ್ಯಾಸಕರು ಹಾಗೂ ಸಾಹಿತಿಗಳಾದ ನಿಸ್ಸಾರ್ ಅಹಮದ್ ಅವರು ಕುವೆಂಪು ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಗುವುದು.
ಕಾರ್ಯಕ್ರಮದ ಅಂಗವಾಗಿ ಟಿ.ಎಂ. ವೀರೇಶ್ ಅವರ ಚಿತ್ರಕಲಾ ಪ್ರದರ್ಶನವೂ ಏರ್ಪಡಿಸಲಾಗಿದ್ದು, ಕಲಾರಸಿಕರಿಗೆ ವಿಶೇಷ ಆಕರ್ಷಣೆಯಾಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬುಡೆನ್ ಸಾಬ್ ವಹಿಸಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಕೆ. ತಿಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯದರ್ಶಿ ಶ್ರೀ ನೀಲಕಂಠ ದೇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಅಧ್ಯಕ್ಷ ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ, ಉಪಾಧ್ಯಕ್ಷ ಚಳ್ಳಕೆರೆ ಯರಿಸ್ವಾಮಿ, ಕಾರ್ಯದರ್ಶಿ ಎಚ್.ಎಸ್.ಟಿ. ಸ್ವಾಮಿ, ಖಜಾಂಚಿ ನಾಗಲಿಂಗರೆಡ್ಡಿ, ಡಾ. ಈ. ರುದ್ರಮುನಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಎಸ್.ಟಿ. ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Views: 86