ಚಿತ್ರದುರ್ಗ: ಪ್ರಾಥಮಿಕ ಆರೋಗ್ಯ ಕೇಂದ್ರ ಗೋಡಬನಾಳ್‌ನಲ್ಲಿ ವಿಶ್ವ ಮಲೇರಿಯಾ ದಿನವನ್ನು ಜಾಗೃತಿ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಸುಧಾಕರ್ ಅವರು ಮಾತನಾಡಿ, ಮಲೇರಿಯಾ ಒಂದು ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಹರಡುತ್ತದೆ ಎಂದು ತಿಳಿಸಿದರು.
ಈ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಿದೆ. ಪ್ರತಿಯೊಬ್ಬರೂ ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜೊತೆಗೆ ಪರಿಸರ ಸ್ವಚ್ಛತೆ ಕಾಪಾಡುವುದು ಮಲೇರಿಯಾ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.
“ನಾವು ಎಲ್ಲರೂ ಕೈಜೋಡಿಸಿದರೆ ಮಾತ್ರ ಮಲೇರಿಯಾ ರೋಗವನ್ನು ನಿರ್ಮೂಲನೆ ಮಾಡಬಹುದು” ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿ ಲೊಕೇಶ್, ಡಿ-ಗ್ರೂಪ್ ಸಿಬ್ಬಂದಿ ಅಜಯ್, ಯೋಗ ತರಬೇತುದಾರ ಬಸವರಾಜ ಎಲ್.ಎಸ್. ಹಾಗೂ ಗ್ರಾಮಸ್ಥರು ಭಾಗವಹಿಸಿ ಜಾಗೃತಿ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದರು.

