ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ

ಸಮಗ್ರ ಸುದ್ದಿ ಜೂನ್ 03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಸಂಜೆ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿ ರಾಜ್ಯದ ಆಡಳಿತದ ಹೊಣೆ ಹೊತ್ತಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ದೈವ ವೀರಗಂಗಾಧರ ಅಜ್ಜಯ್ಯ ಅವರ ಭಾವಚಿತ್ರಕ್ಕೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ ಮೂಲಕ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ತಕ್ಷಣವೇ ಆಡಳಿತಾತ್ಮಕ ತಂಡದ ರಚನೆಗೆ ಮುಂದಾದ ಮುಖ್ಯಮಂತ್ರಿ, ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ಅವರನ್ನು ತಮ್ಮ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಿದ್ದಾರೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಮೂಲತಃ ತುಮಕೂರು ಜಿಲ್ಲೆಯ ಪಾವಗಡದವರಾದ ಅತೀಕ್ ಎಲ್.ಕೆ. ಅವರು 1991ರ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಜೊತೆಗೆ ವಿಶ್ವ ಬ್ಯಾಂಕ್ ಗುಂಪಿನಲ್ಲಿ ಭಾರತದ ಪ್ರತಿನಿಧಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಇನ್ನೊಂದೆಡೆ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಹಾಗೂ ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ರಾಜೇಂದ್ರ ಚೋಳನ್ ಅವರನ್ನು ನೇಮಕ ಮಾಡಲಾಗಿದೆ.

ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದ ಜನತೆಗೆ ಸಂದೇಶ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕದ ಏಳು ಕೋಟಿ ಜನರ ಸೇವೆ ಮಾಡುವ ಅವಕಾಶ ದೊರೆತಿರುವುದು ತಮ್ಮ ಜೀವನದ ಭಾಗ್ಯ ಎಂದು ಹೇಳಿದ್ದಾರೆ. ಜನರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನೀಡಲು ಬದ್ಧನಾಗಿದ್ದೇನೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕವನ್ನು ಇನ್ನಷ್ಟು ಸಮೃದ್ಧ, ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ರೂಪಿಸುವ ಕನಸು ಹೊಂದಿರುವುದಾಗಿ ತಿಳಿಸಿದ ಅವರು, ಈ ಗುರಿ ಸಾಧನೆಗೆ ರಾಜ್ಯದ ಜನರ ಸಹಕಾರ ಅಗತ್ಯವಾಗಿದೆ ಎಂದು ಮನವಿ ಮಾಡಿದ್ದಾರೆ. ತಮ್ಮ ಮೇಲೆ ವಿಶ್ವಾಸವಿಟ್ಟು ನಾಯಕತ್ವದ ಜವಾಬ್ದಾರಿ ನೀಡಿದ ಪಕ್ಷದ ನಾಯಕರು, ಶಾಸಕರು ಹಾಗೂ ರಾಜ್ಯದ ಜನತೆಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *