ಡಿಕೆ ಶಿವಕುಮಾರ್ ಸರ್ಕಾರ ಅಸ್ತಿತ್ವಕ್ಕೆ: ಸಚಿವರಾಗಿ 13 ನಾಯಕರು ಪ್ರಮಾಣವಚನ

ಸಮಗ್ರ ಸುದ್ದಿ ಜೂನ್ 3 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿದರು.

ಇದೇ ವೇಳೆ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಅವರು ಅಧಿಕಾರ ವಹಿಸಿಕೊಂಡರು.

ಮೊದಲ ಹಂತದ ಸಚಿವ ಸಂಪುಟದಲ್ಲಿ ಹಲವು ಅನುಭವಿ ನಾಯಕರು ಸ್ಥಾನ ಪಡೆದಿದ್ದಾರೆ. ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ ಹಾಗೂ ಸತೀಶ್ ಜಾರಕಿಹೊಳಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇದೇ ವೇಳೆ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಯತೀಂದ್ರ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಕೂಡ ಸಚಿವ ಸಂಪುಟದ ಸದಸ್ಯರಾಗಿ ಅಧಿಕಾರ ವಹಿಸಿಕೊಂಡರು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿವಿಧ ರಾಜಕೀಯ ನಾಯಕರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಹೊಸ ಸರ್ಕಾರ ರಾಜ್ಯದ ಅಭಿವೃದ್ಧಿ, ಮೂಲಸೌಕರ್ಯ, ಉದ್ಯೋಗ ಸೃಷ್ಟಿ ಮತ್ತು ಜನಪರ ಯೋಜನೆಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಮೂಡಿದೆ.

ನೂತನ ಸಚಿವ ಸಂಪುಟದ ಮೊದಲ ತಂಡದೊಂದಿಗೆ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಆಡಳಿತದ ಹೊಸ ಅಧ್ಯಾಯಕ್ಕೆ ಚಾಲನೆ ನೀಡಿದೆ.

Leave a Reply

Your email address will not be published. Required fields are marked *