ಮಾರ್ಬಳ್ಳಿ, ಜೂನ್ 12:
ಸರ್ಕಾರಿ ಪ್ರೌಢಶಾಲೆ ಮಾರ್ಬಳ್ಳಿ, ಗ್ರಾಮ ಪಂಚಾಯಿತಿ ಮಾರ್ಬಳ್ಳಿ ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP), ಮೈಸೂರು ಇವರ ಸಹಯೋಗದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಇಂದು ಸರ್ಕಾರಿ ಪ್ರೌಢಶಾಲೆ, ಮಾರ್ಬಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ರಾಜ್ಯಾಧ್ಯಕ್ಷರಾದ ದೇವರಾಜ್ ಟಿ. ಕಾಟೂರು ಅವರು, ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕವಾಗಿದ್ದು, ಅದರ ನಿರ್ಮೂಲನೆಗಾಗಿ ನಿರಂತರ ಜಾಗೃತಿ ಮೂಡಿಸುವುದು ಅತ್ಯವಶ್ಯಕ ಎಂದು ತಿಳಿಸಿದರು. ಬಾಲ ಕಾರ್ಮಿಕ ಪದ್ಧತಿ ನಿಷೇಧಿಸುವ ಕಾನೂನು ಜಾರಿಯಾಗಿ ಹಲವು ವರ್ಷಗಳು ಕಳೆದಿದ್ದರೂ, ಇಂದಿಗೂ ಕೆಲವೆಡೆ ಈ ಪದ್ಧತಿ ಮುಂದುವರಿಯುತ್ತಿರುವುದು ವಿಷಾದನೀಯ ಸಂಗತಿ ಎಂದರು.

ಅವರು ಬಾಲ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಕುರಿತು ಮಾಹಿತಿ ನೀಡಿ, 14 ವರ್ಷದೊಳಗಿನ ಯಾವುದೇ ಮಗು ಯಾವುದೇ ರೀತಿಯ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕಿದ್ದು, ಪೋಷಕರು ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಶಾಲೆಯಿಂದ ಹೊರಗಿಡದೆ ಶಿಕ್ಷಣ ಮುಂದುವರಿಸಲು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು. 18 ವರ್ಷ ತುಂಬುವವರೆಗೆ ಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಹಾಗೂ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಬದಲಾವಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ಶಶಿಕುಮಾರ್, ಸಂಯೋಜಕರು, RLHP, ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ ಈ ವರ್ಷದ ಆಚರಣೆಯ ಉದ್ದೇಶಗಳ ಕುರಿತು ವಿವರಿಸಿದರು. ಪ್ರತಿಯೊಬ್ಬ ಮಗುವಿಗೂ ಸುರಕ್ಷಿತ ಬಾಲ್ಯ, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯಕರ ಬೆಳವಣಿಗೆಯ ಹಕ್ಕುಗಳಿದ್ದು, ಬಾಲ ಕಾರ್ಮಿಕ ಪದ್ಧತಿ ಈ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದರು. ಸಮಾಜದ ಪ್ರತಿಯೊಬ್ಬರೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು, ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ಮಕ್ಕಳು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿ ಜಾಗೃತಿ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಕಾರ್ಯದರ್ಶಿಗಳಾದ *ಶ್ರೀಮತಿ ನಾಗವೇಣಿ, ಮುಖ್ಯ ಶಿಕ್ಷಕರಾದ **ಶ್ರೀಮತಿ ಉಮಾ, ಮಕ್ಕಳ ಪ್ರತಿನಿಧಿಗಳಾದ *ಕೀರ್ತನ ಹಾಗೂ ಶಿವು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
“ಬಾಲ್ಯವು ಕಲಿಕೆಗೆ, ಕಾರ್ಮಿಕತೆಗೆ ಅಲ್ಲ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.