ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ: ಮಕ್ಕಳ ಶಿಕ್ಷಣದ ಮಹತ್ವ ಸಾರಲು ಬೃಹತ್ ಜಾಗೃತಿ ಅಭಿಯಾನ

ಬಾಗಲಕೋಟೆ (ಜೂನ್ 30): ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ರೀಚ್ ಹಾಗೂ ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ (JRC) ಸಂಸ್ಥೆಗಳ ಸಹಯೋಗದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಶಿಕ್ಷಣದ ಮಹತ್ವದ ಕುರಿತು ವ್ಯಾಪಕ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ್ ಸುಂಬಡ ಅವರು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ರೀತಿಯ ಉದ್ಯೋಗದಲ್ಲಿ ತೊಡಗಿಸುವುದು ಸಂಪೂರ್ಣ ಕಾನೂನುಬಾಹಿರವಾಗಿದೆ. ಅದೇ ರೀತಿ, 14 ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಕೂಡ ಕಾನೂನುಬಾಹಿರ. ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಮೂಲಭೂತ ಹಕ್ಕಿದ್ದು, ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಮಿಕ ನಿರೀಕ್ಷಕರಾದ ರಾಜಶೇಖರ ಕುರಡಿಕೇರಿ ಅವರು ಮಾತನಾಡಿ, ಬಾಲ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ-2016ರ ಪ್ರಮುಖ ಅಂಶಗಳನ್ನು ವಿವರಿಸಿದರು. ಮಕ್ಕಳನ್ನು ದುಡಿಸಿಕೊಳ್ಳುವ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಾರ್ವಜನಿಕರಿಗೆ ಬಾಲ ಕಾರ್ಮಿಕರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ 1098 ಮಕ್ಕಳ ಸಹಾಯವಾಣಿ, 112 ತುರ್ತು ಸೇವೆ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡುವಂತೆ ಕರೆ ನೀಡಿದರು.

ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕರಾದ ಸುಧಾಕರ ಬಡಿಗೇರ ಅವರು ಮಾತನಾಡಿ, ಮಕ್ಕಳ ಭವಿಷ್ಯವನ್ನು ರಕ್ಷಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪುನಃ ಶಿಕ್ಷಣದ ಮುಖ್ಯವಾಹಿನಿಗೆ ತರಲು ಎಲ್ಲರೂ ಒಗ್ಗೂಡಿ ಕೈಜೋಡಿಸಬೇಕು ಎಂದು ತಿಳಿಸಿದರು.

ರೀಚ್ ಸಂಸ್ಥೆಯ ನಿರ್ದೇಶಕರಾದ ಜಿ.ಎನ್. ಸಿಂಹ ಅವರು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸಮುದಾಯದ ಭಾಗವಹಿಸುವಿಕೆ ಅತ್ಯಂತ ಅಗತ್ಯ ಎಂದು ಸ್ಪಷ್ಟಪಡಿಸಿದರು.

ಈ ಜಾಗೃತಿ ಅಭಿಯಾನದ ಅಂಗವಾಗಿ ರೀಚ್ ಸಂಸ್ಥೆಯ ಸಿಬ್ಬಂದಿ ಸುಧಾ ಹಾಗೂ ವಿದ್ಯಾರ್ಥಿನಿ ಯಶೋಧಾ ಅವರು ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿದರು. ಪ್ರಮುಖ ಸ್ಥಳಗಳಲ್ಲಿ ಪೋಸ್ಟರ್‌ಗಳನ್ನು ಹಚ್ಚುವ ಮೂಲಕ ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು, ಮಕ್ಕಳ ಶಿಕ್ಷಣದ ಮಹತ್ವ ಹಾಗೂ ಮಕ್ಕಳ ಹಕ್ಕುಗಳ ಕುರಿತು ಜನರಿಗೆ ಜಾಗೃತಿ ಮೂಡಿಸಿದರು.

ರೀಚ್ ಹಾಗೂ ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ (JRC) ಸಂಸ್ಥೆಗಳ ಸಹಯೋಗದಲ್ಲಿ ಈ ಅಭಿಯಾನ ಯಶಸ್ವಿಯಾಗಿ ನೆರವೇರಿತು. ಎಲ್ಲಾದರೂ ಬಾಲ ಕಾರ್ಮಿಕ ಪದ್ಧತಿ ಕಂಡುಬಂದಲ್ಲಿ ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಅಥವಾ 1098 ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿ ಮಕ್ಕಳ ಸುರಕ್ಷತೆಗೆ ಕೈಜೋಡಿಸುವಂತೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳಲಾಯಿತು.

ವರದಿ: ಕುಮಾರ್.ಜಿ.ಎನ್ – 9945712918

Leave a Reply

Your email address will not be published. Required fields are marked *