ದೇಶಭಕ್ತಿ, ತ್ಯಾಗ-ಬಲಿದಾನದ ಸಂದೇಶ ಸಾರಿದ ವಿದ್ಯಾ ವಿಕಾಸ ಸಂಸ್ಥೆಯ ಸ್ವಾತಂತ್ರ್ಯೋತ್ಸವ.

ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶ್ರೀಮತಿ ಸುನೀತ ವಿಜಯ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ. ಪೃಥ್ವೀಶ್ ಮಾತನಾಡಿ, ದೇಶದ ಪ್ರಮುಖ ಆಧಾರಸ್ತಂಭಗಳಾದ ಸೈನಿಕರು, ಶಿಕ್ಷಕರು ಹಾಗೂ ಕೃಷಿಕರ ಸೇವೆಯನ್ನು ಶ್ಲಾಘಿಸಿದರು. ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಜೀವನದಲ್ಲಿ ಎಷ್ಟೇ ಉನ್ನತ ಸಾಧನೆ ಮಾಡಿದರೂ ತಾವು ಹುಟ್ಟಿದ ತಾಯ್ನಾಡಿನ ಹೆಸರನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ದೇಶ ಸೇವೆ ಸಲ್ಲಿಸಿದ ಮಾಜಿ ಸೈನಿಕ ಕೆ. ನಾರಾಯಣ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಸಂಸ್ಥೆಯ ಐಸಿಎಸ್‌ಇ ಪ್ರಾಚಾರ್ಯೆ ಬೀನ ಎ. ಜಾನ್ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ದೇಶವನ್ನು ಸ್ವಚ್ಛವಾಗಿಡುವಲ್ಲಿ ಮಹತ್ವದ ಕೊಡುಗೆ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿದ ಮಾಜಿ ಸೈನಿಕ ಕೆ. ನಾರಾಯಣ್ ಅವರು ತಮ್ಮ ಸೇನಾ ಸೇವೆಯ ದಿನಗಳನ್ನು ಹಾಗೂ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ತಾವು ಅನುಭವಿಸಿದ ಕಷ್ಟ-ಸವಾಲುಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುವುದರ ಜೊತೆಗೆ, ಇಂದು ದೇಶದ ಗಡಿಗಳನ್ನು ಕಾಯುತ್ತಿರುವ ವೀರ ಯೋಧರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ದೇಶಾಭಿಮಾನವನ್ನು ಬೆಳೆಸಿಕೊಂಡು ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಸಂಸ್ಥೆಯ ಮುಖ್ಯೋಪಾಧ್ಯಾಯ ಎನ್.ಜಿ. ತಿಪ್ಪೇಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ನಮಗೆ ಸುಲಭವಾಗಿ ದೊರೆತದ್ದಲ್ಲ. ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದ್ದರಿಂದ ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ನಾಳಿನ ಭಾರತದ ನಿರ್ಮಾತೃಗಳಾಗಿರುವ ಮಕ್ಕಳು ಬುದ್ಧಿವಂತಿಕೆ, ಶಿಸ್ತು, ಉತ್ತಮ ನಡವಳಿಕೆ ಹಾಗೂ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಶಿಕ್ಷಣವು ಕೇವಲ ಅಂಕಗಳಿಗೆ ಸೀಮಿತವಾಗದೆ ಜವಾಬ್ದಾರಿ, ಪ್ರಾಮಾಣಿಕತೆ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಂತಿರಬೇಕು ಎಂದು ಅವರು ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಜನರಲ್ಲಿ ರಾಷ್ಟ್ರೀಯ ಐಕ್ಯತೆ, ಸಹಕಾರ ಮನೋಭಾವ ಹಾಗೂ ದೇಶಾಭಿಮಾನ ಮೂಡಿಸುವ ಉದ್ದೇಶದಿಂದ ಒನಕೆ ಓಬವ್ವ ಪ್ರತಿಮೆಯ ಮುಂಭಾಗದಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಅಭಿನಯವು ಸಾರ್ವಜನಿಕರ ಗಮನ ಸೆಳೆಯಿತು.

ನಂತರ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಹಿನ್ನೆಲೆಯ ವಿವಿಧ ವಿಷಯಗಳನ್ನು ಒಳಗೊಂಡ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳ ಮನೋಜ್ಞ ಪ್ರದರ್ಶನಗಳನ್ನು ಕಂಡ ಪೋಷಕರು, ಶಿಕ್ಷಕರು ಹಾಗೂ ನೆರೆದಿದ್ದವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯಕುಮಾರ್, ನಿರ್ದೇಶಕಿ ಸ್ನೇಹ ಎನ್., ಎಸ್. ಮಹೇಶ್, ಪಿಯು ಕಾಲೇಜಿನ ಪ್ರಾಚಾರ್ಯ ಗುರುಪ್ರಸಾದ್ ಟಿ.ಆರ್., ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ ಹಾಗೂ ಮಹೇಶ್ ಪಿಯು ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಶಾಲಾ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ಸಹನಾ ಸ್ವಾಗತಿಸಿದರು. ಮಂಜೂಷ ಮ್ಯಾಥ್ಯು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook pagehttps://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *