Vedio: ಭೀಮಸಮುದ್ರ| ವೇದಾಂತ ಕಂಪನಿಯಿಂದ ಕಾರ್ಮಿಕರ ವಜಾ ಆರೋಪ; ಬೊಮ್ಮೇನಹಳ್ಳಿಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ.

ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203

ಭೀಮಸಮುದ್ರ. ಸೆ: 28

ಸಮೀಪದ ಬೊಮ್ಮೇನಹಳ್ಳಿ ಗ್ರಾಮದಲ್ಲಿರುವ ವೇದಾಂತ ಕಂಪನಿಯ ಸಿಸಗೋವ್ ಲಿಮಿಟೆಡ್‌ನಲ್ಲಿ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದನ್ನು ಖಂಡಿಸಿ, ಕಾರ್ಮಿಕರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಬೊಮ್ಮೇನಹಳ್ಳಿ, ಭೀಮಸಮುದ್ರ, ಕಡ್ಲೆಗುದ್ದು, ಗುಂಟನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಕ್ಕೂ ಹೆಚ್ಚು ಕಾರ್ಮಿಕರನ್ನು ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿರುವ ಕಾರ್ಮಿಕರು, ತಮ್ಮನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳುವವರೆಗೂ ಮುಷ್ಕರ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮುಷ್ಕರಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕರು ಹಾಗೂ ಗ್ರಾಮಸ್ಥರು ಕಂಪನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೆಲಸಕ್ಕೆ ಮರುನೇಮಕ ಮಾಡುವಂತೆ ಆಗ್ರಹಿಸಿದರು.

ಮುಷ್ಕರಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದು ವಿಷಾದನೀಯ. ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವ ಮೊದಲು ನಿಯಮಾನುಸಾರ ನೋಟಿಸ್ ನೀಡಬೇಕು. ಆದರೆ, ರಾತ್ರಿ ಮೊಬೈಲ್ ಮೂಲಕ ಸಂದೇಶ ಕಳುಹಿಸಿ ಕೆಲಸದಿಂದ ತೆಗೆದುಹಾಕಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾರ್ಮಿಕರು ತಮಗೆ ಪ್ರತಿ ತಿಂಗಳು ಬರುವ ವೇತನವನ್ನೇ ನಂಬಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏಕಾಏಕಿ ಕೆಲಸ ಕಳೆದುಕೊಂಡರೆ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತದೆ. ಆದ್ದರಿಂದ ಕಂಪನಿಯ ಆಡಳಿತ ಮಂಡಳಿ ಕೂಡಲೇ ಕಾರ್ಮಿಕರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಗ್ರಾಮಗಳಲ್ಲಿಯೇ ಇಂಜಿನಿಯರಿಂಗ್ ಹಾಗೂ ಐಟಿಐ ಶಿಕ್ಷಣ ಪಡೆದಿರುವ ಅನೇಕ ನಿರುದ್ಯೋಗಿ ಯುವಕರಿದ್ದಾರೆ. ಆದರೆ, ಸ್ಥಳೀಯರಿಗೆ ಉದ್ಯೋಗಾವಕಾಶ ನೀಡುವ ಬದಲು ಹೊರರಾಜ್ಯಗಳಿಂದ ಕಾರ್ಮಿಕರನ್ನು ಕರೆತಂದು ಕೆಲಸಕ್ಕೆ ನೇಮಿಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು. ಕಾರ್ಮಿಕರನ್ನು ಕೂಡಲೇ ಕೆಲಸಕ್ಕೆ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಗಣಿ ಕಂಪನಿಯ ವಿರುದ್ಧ ಜಿಲ್ಲಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೊಮ್ಮೇನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಎನ್. ಮಂಜುನಾಥ್ ಮಾತನಾಡಿ, ಬೊಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಂಪನಿಯು ಕಳೆದ ಎರಡು ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ಸುಮಾರು 12 ಲಕ್ಷ ರೂ. ತೆರಿಗೆ ಪಾವತಿಸಿಲ್ಲ ಎಂದು ಆರೋಪಿಸಿದರು.

ಕಳೆದ 15 ದಿನಗಳಿಂದ ಕಂಪನಿಯ ಜನರಲ್ ಮ್ಯಾನೇಜರ್ ನಾರಾಯಣ್ ಅವರನ್ನು ಸಂಪರ್ಕಿಸಿ ಕಾರ್ಮಿಕರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರೂ, ಈವರೆಗೆ ಯಾವುದೇ ಭರವಸೆ ದೊರೆತಿಲ್ಲ. ಹೀಗಾಗಿ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದೇವೆ. ಕಂಪನಿಯ ಆಡಳಿತ ಮಂಡಳಿ ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕರನ್ನು ಕೆಲಸಕ್ಕೆ ಮರುನೇಮಕ ಮಾಡಬೇಕು, ಇಲ್ಲವಾದರೆ ಕಂಪನಿಯನ್ನು ಮುಚ್ಚಬೇಕು ಎಂಬ ಆಗ್ರಹದೊಂದಿಗೆ ಆರಂಭವಾದ ಈ ಮುಷ್ಕರದಲ್ಲಿ ಬೊಮ್ಮೇನಹಳ್ಳಿ ಗ್ರಾಮದ ಸಾರ್ವಜನಿಕರು ಹಾಗೂ ಕೆಲಸ ಕಳೆದುಕೊಂಡ ಕಾರ್ಮಿಕರು ಪಾಲ್ಗೊಂಡಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *