ಮೈಸೂರು: ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟುವುದು, ತಾಯಿ ಮತ್ತು ಮಗುವಿನ ಆರೋಗ್ಯ ಸುಧಾರಿಸುವುದು ಹಾಗೂ ಸಾರ್ವಜನಿಕರಲ್ಲಿ ಪೌಷ್ಟಿಕ ಆಹಾರದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರಿನ ವರುಣಾದಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ–2026ರ ಅಂಗವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಸೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮೈಸೂರು ಗ್ರಾಮಾಂತರ ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP), ಮೈಸೂರು ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ‘ಅಪೌಷ್ಟಿಕತೆ ಮುಕ್ತ ಮೈಸೂರು’ ಪರಿಕಲ್ಪನೆಗೆ ವಿಶೇಷ ಒತ್ತು ನೀಡಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಪೌಷ್ಟಿಕ ಆಹಾರದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ RLHP ಸಂಸ್ಥೆಯ ವತಿಯಿಂದ ಪೌಷ್ಟಿಕ ಆಹಾರ ಕುರಿತ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ನಾಗರಾಜು ಸಿದ್ದಪ್ಪ ಅಂಕಸದೊಡ್ಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರ, ಸಮತೋಲಿತ ಆಹಾರ ಪದ್ಧತಿ ಹಾಗೂ ಸ್ವಚ್ಛತೆ ಅತ್ಯಂತ ಅಗತ್ಯವಾಗಿವೆ. ಮಕ್ಕಳ ಆರೋಗ್ಯದ ಜವಾಬ್ದಾರಿ ಕೇವಲ ಕುಟುಂಬಕ್ಕೆ ಸೀಮಿತವಾಗಿರದೆ ಇಡೀ ಸಮುದಾಯಕ್ಕೂ ಸೇರಿದೆ ಎಂದು ತಿಳಿಸಿದರು.
ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಗತ್ಯವಾದ ಪೌಷ್ಟಿಕ ಆಹಾರ ಮತ್ತು ಆರೋಗ್ಯ ಸೇವೆಗಳು ಸಕಾಲದಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ, ಕಡಿಮೆ ತೂಕ ಹಾಗೂ ಬೆಳವಣಿಗೆಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಆರೋಗ್ಯ ಮತ್ತು ಪೌಷ್ಟಿಕ ಸೇವೆಗಳನ್ನು ಒದಗಿಸಬೇಕು ಎಂದು ಸಲಹೆ ನೀಡಿದರು.
ಮಹಿಳೆಯರು ಮತ್ತು ಮಕ್ಕಳಿಗೆ ಸಂವಿಧಾನ ಹಾಗೂ ಕಾನೂನಿನಡಿ ದೊರೆಯುವ ಹಕ್ಕುಗಳು, ಉಚಿತ ಕಾನೂನು ನೆರವು ಮತ್ತು ವಿವಿಧ ಕಾನೂನು ಸೌಲಭ್ಯಗಳ ಕುರಿತು ಅರಿವು ಮೂಡಿಸುವುದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಮುಖ ಕಾರ್ಯವಾಗಿದೆ. ಅಗತ್ಯವಿರುವವರು ಕಾನೂನು ನೆರವು ಹಾಗೂ ಸಲಹೆ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು ಮಾತನಾಡಿ, ಪೋಷಣ್ ಅಭಿಯಾನದ ಉದ್ದೇಶಗಳು ಹಾಗೂ ಅಪೌಷ್ಟಿಕತೆ, ಕಡಿಮೆ ತೂಕ, ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆ ತಡೆಗಟ್ಟುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಗರ್ಭಿಣಿಯರು, ತಾಯಂದಿರು ಹಾಗೂ ಶೂನ್ಯದಿಂದ ಎರಡು ವರ್ಷದೊಳಗಿನ ಮಕ್ಕಳಿಗೆ ಸಮತೋಲಿತ ಮತ್ತು ವೈವಿಧ್ಯಮಯ ಪೌಷ್ಟಿಕ ಆಹಾರ ಒದಗಿಸುವ ಮಹತ್ವವನ್ನು ವಿವರಿಸಿದರು.
ಇದೇ ಸಂದರ್ಭದಲ್ಲಿ ‘ನಮ್ಮ ಅಂಗನವಾಡಿ–ನಮ್ಮ ಜವಾಬ್ದಾರಿ’ ಎಂಬ ಪರಿಕಲ್ಪನೆಯಡಿ ಅಂಗನವಾಡಿ ಕೇಂದ್ರಗಳ ಸುಸ್ಥಿರ ಅಭಿವೃದ್ಧಿ, ಮಕ್ಕಳ ಪೌಷ್ಟಿಕತೆ ಹಾಗೂ ಪ್ರಾರಂಭಿಕ ಬಾಲ್ಯ ಬೆಳವಣಿಗೆಯಲ್ಲಿ ಪೋಷಕರು ಮತ್ತು ಸಮುದಾಯದ ಸಕ್ರಿಯ ಸಹಭಾಗಿತ್ವದ ಅಗತ್ಯವನ್ನು ಒತ್ತಿಹೇಳಿದರು.
ಕಾರ್ಯಕ್ರಮದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ (ICDS) ಅಡಿಯಲ್ಲಿ ದೊರೆಯುವ ಪೂರಕ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ, ಲಸಿಕಾಕರಣ, ಶಾಲಾ ಪೂರ್ವ ಶಿಕ್ಷಣ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆ ಶಿಕ್ಷಣದ ಕುರಿತು ಮಾಹಿತಿ ನೀಡಲಾಯಿತು. ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು ಮತ್ತು ಅವರ ಪ್ರಾರಂಭಿಕ ಬೆಳವಣಿಗೆಗೆ ಉತ್ತೇಜನ ನೀಡುವ ಕುರಿತು ಜಾಗೃತಿ ಮೂಡಿಸಲಾಯಿತು.
ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಹಾಗೂ ಪೌಷ್ಟಿಕತೆಯನ್ನು ಸುಧಾರಿಸುವಲ್ಲಿ ಕುಟುಂಬ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳು ಮತ್ತು ಸಮುದಾಯದ ಸಕ್ರಿಯ ಸಹಭಾಗಿತ್ವ ಅತ್ಯಗತ್ಯ ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ಸಾರಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ವಿಜಯ್ ಕುಮಾರ್ ಎಸ್., ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಟಪ್ಪ, RLHP ನಿರ್ದೇಶಕಿ ಸರಸ್ವತಿ, ವರುಣಾ ವೈದ್ಯಾಧಿಕಾರಿ ಪ್ರಸಾದ್, ರಾಘವೇಂದ್ರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾಗ್ಯಶ್ರೀ, ಸಿದ್ದರಾಮನಹುಂಡಿ–ವರುಣಾ ಮೇಲ್ವಿಚಾರಕಿ ನಾಗರತ್ನ ಸೇರಿದಂತೆ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು.