ಚಿತ್ರದುರ್ಗ, ನ.14:
ವರದಿ ಮತ್ತು ಫೋಟೋ ಕೃಪೆ, ರವಿ ಕೆ. ಅಂಬೇಕರ್
ಮಕ್ಕಳೇ ದೇಶದ ಭವಿಷ್ಯದ ನಿಜವಾದ ಸಂಪತ್ತು ಎಂಬ ಪಂಡಿತ್ ಜವಾಹರಲಾಲ್ ನೆಹರು ಅವರ ಆಶಯದಂತೆ ಪ್ರತಿಯೊಂದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡಬೇಕು ಎಂದು ರಾಜ್ಯ ಸರ್ಕಾರಿ ಆಯುಷ್ ಯೋಗ ಶಿಕ್ಷಕರ ಸಂಘದ ಕೋಶಾಧ್ಯಕ್ಷ ರವಿ ಕೆ. ಅಂಬೇಕರ್ ಅಭಿಪ್ರಾಯಪಟ್ಟರು.
ಚಿತ್ರದುರ್ಗ ತಾಲ್ಲೂಕಿನ ಸಜ್ಜನಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶನಿವಾರ ಪಂಡಿತ್ ಜವಾಹರಲಾಲ್ ನೆಹರು ಅವರ 137ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ಪಂಡಿತ್ ಜವಾಹರಲಾಲ್ ನೆಹರು ಅವರನ್ನು ಮಕ್ಕಳು ಪ್ರೀತಿಯಿಂದ ‘ಚಾಚಾ ನೆಹರು’ ಎಂದು ಕರೆಯುತ್ತಿದ್ದರು. ಮಕ್ಕಳೇ ದೇಶದ ಭವಿಷ್ಯದ ನಿರ್ಮಾತೃಗಳು ಎಂಬ ನಂಬಿಕೆ ಹೊಂದಿದ್ದ ಅವರು, ಮಕ್ಕಳ ಶಿಕ್ಷಣ, ಆರೋಗ್ಯ, ವ್ಯಕ್ತಿತ್ವ ವಿಕಸನ ಹಾಗೂ ಉತ್ತಮ ಭವಿಷ್ಯಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು ಎಂದು ತಿಳಿಸಿದರು.
ಮಕ್ಕಳ ದಿನಾಚರಣೆಯು ಕೇವಲ ಸಂಭ್ರಮಾಚರಣೆಗೆ ಸೀಮಿತವಾಗದೆ, ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ, ಉತ್ತಮ ಸಂಸ್ಕಾರ, ಆರೋಗ್ಯಕರ ವಾತಾವರಣ ಹಾಗೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ಅವಕಾಶ ಕಲ್ಪಿಸುವ ಸಂಕಲ್ಪದ ದಿನವಾಗಬೇಕು. ಮಕ್ಕಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡುವುದರ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯ, ಯೋಗ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಮೊಬೈಲ್ ಮತ್ತು ಇತರ ತಂತ್ರಜ್ಞಾನ ಸಾಧನಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಆಸಕ್ತಿ ಮತ್ತು ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಸತೀಶಪ್ಪ ಆರ್. ಮಾತನಾಡಿ, ಇಂದಿನ ಮಕ್ಕಳು ನಾಳಿನ ವಿಜ್ಞಾನಿಗಳು, ವೈದ್ಯರು, ಶಿಕ್ಷಕರು, ಕ್ರೀಡಾಪಟುಗಳು ಹಾಗೂ ಜವಾಬ್ದಾರಿಯುತ ನಾಗರಿಕರಾಗಲಿದ್ದಾರೆ. ಆದ್ದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಶಿಸ್ತು, ಸಮಯಪ್ರಜ್ಞೆ ಮತ್ತು ದೇಶಪ್ರೇಮದಂತಹ ಗುಣಗಳನ್ನು ಬೆಳೆಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜೀವನದ ಆದರ್ಶಗಳು ಮತ್ತು ಸಾಧನೆಗಳನ್ನು ಮಕ್ಕಳು ಅರಿತುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳ ಮುಖದಲ್ಲಿ ನಗು ಮೂಡಿದಾಗ ಮಾತ್ರ ದೇಶದ ಭವಿಷ್ಯ ಉಜ್ವಲವಾಗಲು ಸಾಧ್ಯ. ಪ್ರತಿಯೊಂದು ಮಗುವಿಗೂ ಸಮಾನ ಅವಕಾಶ ಹಾಗೂ ಉತ್ತಮ ಭವಿಷ್ಯ ದೊರೆಯಬೇಕು ಎಂಬ ನೆಹರು ಅವರ ಆಶಯವನ್ನು ಸಾಕಾರಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ಶಕುಂತಲಮ್ಮ, ರೇಷ್ಮಾ, ಶ್ರೀಲಕ್ಷ್ಮೀ, ರವಿಕುಮಾರ್ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಇತರರು ಉಪಸ್ಥಿತರಿದ್ದರು.
ಮಕ್ಕಳ ಮಹತ್ವ, ಅವರ ಹಕ್ಕುಗಳು ಹಾಗೂ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿಯನ್ನು ಸಾರುವ ಮೂಲಕ ಮಕ್ಕಳ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು