ಬಾಗಲಕೋಟೆ, ನ.15:
ವರದಿ : ಕುಮಾರ್ ಜಿ.ಎನ್ – 9945712918
ಮಕ್ಕಳ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಹಾಗೂ ಮಕ್ಕಳ ಅಭಿಪ್ರಾಯ ಮತ್ತು ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಬೆಂಗಳೂರು ಹಾಗೂ ರೀಚ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಸಂಸತ್-2026 ಕಾರ್ಯಕ್ರಮವನ್ನು ನವೆಂಬರ್ 14ರಂದು ಬಾಗಲಕೋಟೆಯ ಕೋರ್ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗೌರವಾನ್ವಿತ ಚಂದ್ರಶೇಖರ ಪಿ. ದಿಡ್ಡಿ ಅವರು, ‘ಎಚ್ಚರ – ಬಾಲ್ಯವಿವಾಹ ನಿಷೇಧಿಸಲಾಗಿದೆ‘ ಎಂಬ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು, ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.40ರಷ್ಟು ಮಂದಿ 18 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಮಕ್ಕಳೂ ಸಹ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಾಗಬೇಕು ಹಾಗೂ ಅವರ ಅಭಿಪ್ರಾಯಗಳಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರವು ಮಕ್ಕಳ ಗ್ರಾಮಸಭೆ, ವಾರ್ಡ್ ಸಭೆಗಳಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.
ಮಕ್ಕಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಅವರ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಯುನಿಸೆಫ್, ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಹಾಗೂ ರೀಚ್ ಸಂಸ್ಥೆಯ ಸಹಯೋಗದಲ್ಲಿ ಮಕ್ಕಳ ಸಂಸತ್-2026 ಆಯೋಜಿಸಿರುವುದು ಶ್ಲಾಘನೀಯ. ಇಂದಿನ ಮಕ್ಕಳು ಇಂದಿನ ಪ್ರಜೆಗಳಾಗಿದ್ದು, ಗರ್ಭಾವಸ್ಥೆಯಿಂದಲೇ ಮಕ್ಕಳಿಗೆ ಕಾನೂನಿನ ರಕ್ಷಣೆ ದೊರೆಯುತ್ತದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ ಎಂದು ಹೇಳಿದರು.
ಈ ಮಕ್ಕಳ ಸಂಸತ್ತಿನ ಮೂಲಕ ಬಾಗಲಕೋಟೆ ಜಿಲ್ಲೆಯ ಮಕ್ಕಳು ತಮ್ಮ ಸಮಸ್ಯೆಗಳು, ಸವಾಲುಗಳು ಹಾಗೂ ಬೇಡಿಕೆಗಳನ್ನು ಕ್ರೋಡೀಕರಿಸಿ ರಾಜ್ಯಮಟ್ಟದ ಸಭೆಯಲ್ಲಿ ಮಂಡಿಸಬೇಕು. ಆ ಮೂಲಕ ಸರ್ಕಾರದ ಮಟ್ಟದಲ್ಲಿ ಮಕ್ಕಳ ಪರವಾಗಿ ಹೊಸ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ರೂಪಿಸಲು ಈ ಸಮಾಲೋಚನೆ ಸಹಕಾರಿಯಾಗಲಿ ಎಂದು ಆಶಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರೀಚ್ ಸಂಸ್ಥೆ ಹಾಗೂ ಕೆಸಿಆರ್‌ಒ ಸದಸ್ಯ ಕೇಶವ್ ಟಿ. ಅವರು, ಮಕ್ಕಳಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮತ್ತು ನಿರ್ಧಾರ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಕ್ಕಿದೆ. ಇಂದಿನ ಮಕ್ಕಳು ಕುಟುಂಬ, ಸಮುದಾಯ ಹಾಗೂ ಶಾಲೆಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಸತಿ, ಆಹಾರ ಮತ್ತು ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮಕ್ಕಳ ಸಂಸತ್ತಿನಲ್ಲಿ ಮುಕ್ತವಾಗಿ ಚರ್ಚಿಸಿ ಸರ್ಕಾರಕ್ಕೆ ಸೂಕ್ತ ಸಲಹೆ ಹಾಗೂ ಮಾಹಿತಿ ನೀಡುವ ಮೂಲಕ ಈ ಸಮಾಲೋಚನೆ ಯಶಸ್ವಿಯಾಗಲಿ ಎಂದು ಹಾರೈಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ವೀಣಾ ಎಂ. ಅವರು ಮಕ್ಕಳ ಹಕ್ಕುಗಳು ಹಾಗೂ ಅವುಗಳ ರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಬಾಗಲಕೋಟೆ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ‘ಬಾಲ್ಯವಿವಾಹ ಮುಕ್ತ ಭಾರತ – 100 ದಿನಗಳ ಅಭಿಯಾನ’ದ ಅಂಗವಾಗಿ ಪ್ರತಿಜ್ಞಾವಿಧಿಯನ್ನು ಸುಧಾ ಅವರು ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಸಿದ್ದನಗೌಡ ಪಾಟೀಲ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಮಕ್ಕಳ ವಿವಿಧ ಸಮಸ್ಯೆಗಳ ಕುರಿತು ಗಮನ ಸೆಳೆದರು. ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಮಕ್ಕಳು ಎದುರಿಸುವ ಸಮಸ್ಯೆಗಳನ್ನು ಮಕ್ಕಳ ಕಲ್ಯಾಣ ಸಮಿತಿಯ ಗಮನಕ್ಕೆ ತರಲು ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಬಹುದು. ಈ ಮೂಲಕ ಸಂಕಷ್ಟದಲ್ಲಿರುವ ಮಕ್ಕಳಿಗೆ ಅಗತ್ಯ ನೆರವು ಹಾಗೂ ಪರಿಹಾರ ದೊರೆಯಲು ಸಾಧ್ಯವಿದೆ ಎಂದು ತಿಳಿಸಿ, ಮಕ್ಕಳ ಸಂಸತ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿ ಶೈಲಜಾ ಅವರು ಮಕ್ಕಳ ಹಕ್ಕುಗಳು, ಹವಾಮಾನ ಬದಲಾವಣೆ, ಮಕ್ಕಳ ಶಿಕ್ಷಣದ ಮಟ್ಟ, ಆರೋಗ್ಯ ಮತ್ತು ರಕ್ಷಣೆಯ ಕುರಿತು ಮಾಹಿತಿ ನೀಡಿದರು. ನಂತರ ಮಕ್ಕಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿ, ಅವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ಕಂಡುಕೊಳ್ಳಬಹುದಾದ ಪರಿಹಾರಗಳ ಕುರಿತು ಗುಂಪು ಚರ್ಚೆ ನಡೆಸಲಾಯಿತು.
ಮಕ್ಕಳಿಂದ ಹಲವು ಪ್ರಮುಖ ಸಮಸ್ಯೆಗಳ ಮಂಡನೆ
ಮಕ್ಕಳ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ತಮ್ಮ ಅನುಭವಗಳು ಹಾಗೂ ಸಮಾಜದಲ್ಲಿ ಮಕ್ಕಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಮಂಡಿಸಿದರು. ಪ್ರಮುಖವಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮಸ್ಯೆಗಳು, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಮಾರಾಟ ಮತ್ತು ಸಾಗಣೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಕೌಟುಂಬಿಕ ಹಿಂಸೆ, ಶಾಲೆಗಳಲ್ಲಿ ದೈಹಿಕ ಶಿಕ್ಷೆ, ಲಿಂಗ ತಾರತಮ್ಯ ಹಾಗೂ ಮದ್ಯ, ಗುಟ್ಕಾ ಮತ್ತು ಸಿಗರೇಟ್‌ನಂತಹ ದುಶ್ಚಟಗಳಿಗೆ ಮಕ್ಕಳು ಬಲಿಯಾಗುತ್ತಿರುವ ವಿಚಾರಗಳನ್ನು ಪ್ರಸ್ತಾಪಿಸಿದರು.
ಇದಲ್ಲದೆ ಮಕ್ಕಳ ಆತ್ಮಹತ್ಯೆ ಪ್ರಕರಣಗಳು, ಜೀವನ ಕೌಶಲ್ಯಗಳ ಕೊರತೆ, ಸಾರಿಗೆ ಸಂಪರ್ಕ ವ್ಯವಸ್ಥೆಯ ಸಮಸ್ಯೆಗಳು, ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆ, ಎಐ (AI) ಮೂಲಕ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡುವ ಸಾಧ್ಯತೆಗಳು, 18 ವರ್ಷದವರೆಗಿನ ಎಲ್ಲ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕನ್ನು ವಿಸ್ತರಿಸುವುದು, ಮೌಲ್ಯ ಶಿಕ್ಷಣ ಹಾಗೂ ಕಂಪ್ಯೂಟರ್ ಶಿಕ್ಷಣಕ್ಕೆ ಶಿಕ್ಷಕರ ಕೊರತೆಯಂತಹ ವಿಷಯಗಳ ಬಗ್ಗೆಯೂ ಚರ್ಚಿಸಲಾಯಿತು.
ಮಕ್ಕಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಮಂಡಿಸಿದ ಕುಮಾರಿ ಸಮೀರಾ ರಸೂಲ್ ಸಾಹಬ್ ಚಿತ್ತರಗಿ, ಸರ್ಕಾರಿ ಪ್ರೌಢಶಾಲೆ, ನವನಗರ ಹಾಗೂ ಲಕ್ಷ್ಮಿಕಾಂತ್ ಬಿರಾದರ, ಸರ್ಕಾರಿ ಆದರ್ಶ ವಿದ್ಯಾಲಯ, ನವನಗರ, ಬಾಗಲಕೋಟೆ ಇವರನ್ನು ರಾಜ್ಯಮಟ್ಟದ ಮಕ್ಕಳ ಸಂಸತ್ತಿಗೆ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ರೀಚ್ ಸಂಸ್ಥೆಯ ಶಶಿಕಲಾ ನಿರೂಪಿಸಿದರು. ಸುಧಾ ಸ್ವಾಗತಿಸಿದರು. ಮಕ್ಕಳ ಸಹಾಯವಾಣಿ-1098ರ ಸಂಯೋಜಕಿ ವೇಧಾಶ್ರೀ ನಾಯಕ್ ಸೇರಿದಂತೆ ವಿವಿಧ ಶಾಲೆಗಳಿಂದ ಆಗಮಿಸಿದ್ದ ಶಿಕ್ಷಕರು ಹಾಗೂ 50ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.
ಮಕ್ಕಳ ಧ್ವನಿಗೆ ವೇದಿಕೆ ಕಲ್ಪಿಸಿ, ಅವರ ಸಮಸ್ಯೆಗಳನ್ನು ಚರ್ಚಿಸುವುದರ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಸಂಸತ್-2026 ಕಾರ್ಯಕ್ರಮ ಮಹತ್ವದ ಹೆಜ್ಜೆಯಾಯಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು