ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿತನದ ದುಷ್ಪರಿಣಾಮಗಳ ಕುರಿತು ಜಾಗೃತಿ ಅಭಿಯಾನ
ಮೈಸೂರು, ನ. 26:
ವರದಿ ಮತ್ತು ಫೋಟೋ ಕೃಪೆ, ಸoಪತ್ ಕಟ್ಟಿ – 9448911695
ಬಾಲ್ಯ ವಿವಾಹವು ಹೆಣ್ಣು ಮಕ್ಕಳ ಮಾನಸಿಕ, ದೈಹಿಕ, ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಸಿನಲ್ಲಿ ವಿವಾಹವಾಗಬಾರದು ಹಾಗೂ ಇಂತಹ ಘಟನೆಗಳು ನಡೆಯದಂತೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಮೈಸೂರಿನ 1ನೇ ಪೋಕ್ಸೋ ನ್ಯಾಯಾಲಯದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆನಂದ್ ಪಿ. ಹೊಗಾಡೆ ಕರೆ ನೀಡಿದರು.
ನಗರದ ಉದಯಗಿರಿಯ ಶ್ರೀ ಮಲ್ಲಿಕಾರ್ಜುನ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಆವರಣದಲ್ಲಿ ನವೆಂಬರ್ 26ರಂದು ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP), ಮೈಸೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ (1098), ಚೈಲ್ಡ್ ಫಂಡ್ ಇಂಟರ್‌ನ್ಯಾಶನಲ್ ಹಾಗೂ ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ **’ಬಾಲ ಸುರಕ್ಷಾ ಅಭಿಯಾನ’**ದ ಅಂಗವಾಗಿ ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿತನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಮೈಸೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲ ಗರ್ಭಿಣಿಯರು ಹಾಗೂ ಪೋಕ್ಸೋ ಕಾಯ್ದೆಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಪ್ರಕರಣಗಳಲ್ಲಿ ಯುವಜನರು ಕಾನೂನು ಸಂಘರ್ಷಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಲ್ಯ ವಿವಾಹದಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗಿಯಾಗುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಆಟವಾಡುವ ಮತ್ತು ಕಲಿಯುವ ವಯಸ್ಸಿನಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿತನದ ಸಮಸ್ಯೆಗಳಿಗೆ ಸಿಲುಕುವುದರಿಂದ ಮಕ್ಕಳು ತಮ್ಮ ಬಾಲ್ಯ, ಶಿಕ್ಷಣ ಮತ್ತು ಉಜ್ವಲ ಭವಿಷ್ಯವನ್ನು ಕಳೆದುಕೊಳ್ಳುತ್ತಾರೆ. ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಪೋಕ್ಸೋ ಕಾಯ್ದೆಯಡಿ ಅಪ್ರಾಪ್ತರ ಸಮ್ಮತಿಯು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ. ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಮತ್ತು ಶಿಕ್ಷೆಗೆ ಅವಕಾಶವಿದೆ ಎಂದು ತಿಳಿಸಿದರು.

ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದ ನೈಜ ಪ್ರಕರಣಗಳನ್ನು ಉದಾಹರಿಸಿದ ಅವರು, ಪ್ರೀತಿ, ಪ್ರೇಮ ಹಾಗೂ ವಿವಾಹಕ್ಕೆ ಸೂಕ್ತ ವಯಸ್ಸು ಮತ್ತು ಪ್ರಬುದ್ಧತೆ ಅಗತ್ಯ. ಅಪ್ರಾಪ್ತ ವಯಸ್ಸಿನಲ್ಲಿ ಇಂತಹ ಬೆಳವಣಿಗೆಗಳಿಗೆ ಒಳಗಾಗುವುದರಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ತೊಂದರೆಯಾಗುತ್ತದೆ. ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳು ತಮ್ಮ ಗುರಿಯಿಂದ ದೂರವಾಗಬಾರದು. ಶಿಕ್ಷಣಕ್ಕೆ ಆದ್ಯತೆ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾನೂನುಬದ್ಧ ವಯಸ್ಸಿಗೆ ಮುನ್ನ ವಿವಾಹವಾಗುವುದಿಲ್ಲ ಹಾಗೂ ತಮ್ಮ ಸುತ್ತಮುತ್ತ ಬಾಲ್ಯ ವಿವಾಹ ನಡೆಯಲು ಅವಕಾಶ ನೀಡುವುದಿಲ್ಲ ಎಂಬ ದೃಢ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.
ಮಕ್ಕಳ ಸಹಾಯವಾಣಿ 1098ರ ಸದುಪಯೋಗ ಪಡೆದುಕೊಳ್ಳಿ: ರಘು ಎ.ಎಸ್.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಕ್ಕಳ ಸಹಾಯವಾಣಿ (1098) ಜಿಲ್ಲಾ ಸಂಯೋಜಕ ರಘು ಎ.ಎಸ್. ಮಾತನಾಡಿ, ಮಕ್ಕಳ ಸಹಾಯವಾಣಿಯ ಕಾರ್ಯವೈಖರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಕಲ್ಯಾಣ ಯೋಜನೆಗಳು ಹಾಗೂ ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿತನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಮಕ್ಕಳ ಹಕ್ಕುಗಳ ಉಲ್ಲಂಘನೆ, ಬಾಲ್ಯ ವಿವಾಹ ಅಥವಾ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಅಥವಾ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಉದ್ದೇಶ ವಿವರಿಸಿದ ಸಂಪತ್ ಕಟ್ಟಿ
ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP), ಮೈಸೂರಿನ ಹಿರಿಯ ಯೋಜನಾಧಿಕಾರಿ ಸಂಪತ್ ಕಟ್ಟಿ ಅವರು, ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ಬಾಲ್ಯ ವಿವಾಹ ಮುಕ್ತ ಭಾರತ ನಿರ್ಮಾಣದ ಉದ್ದೇಶದಿಂದ ಹಮ್ಮಿಕೊಂಡಿರುವ ‘ಬಾಲ ಸುರಕ್ಷಾ ಅಭಿಯಾನ’ದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮಧುರಾ ಅವರು ಉಪಸ್ಥಿತರಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕ ಯೋಗೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಚಿತ್ರಕಲಾ ಸ್ಪರ್ಧೆ: ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
ಬಾಲ ಸುರಕ್ಷಾ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿತನದ ದುಷ್ಪರಿಣಾಮಗಳ ಕುರಿತು ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಬಾಲ್ಯ ವಿವಾಹದ ದುಷ್ಪರಿಣಾಮಗಳು, ಮಕ್ಕಳ ಹಕ್ಕುಗಳು, ಕಾನೂನು ರಕ್ಷಣೆ ಹಾಗೂ ಸುರಕ್ಷಿತ ಬಾಲ್ಯದ ಮಹತ್ವದ ಕುರಿತು ಅರಿವು ಪಡೆದುಕೊಂಡರು. ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಕಾಲೇಜಿನ ಬೋಧಕ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು