ಚಿತ್ರದುರ್ಗ, ಜು. 19:
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತು ಇನ್ನೆರಡು-ಮೂರು ದಿನಗಳಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಪಕ್ಷದ ಎಲ್ಲ ನಾಯಕರು ಗೌರವದಿಂದ ಸ್ವೀಕರಿಸಲಿದ್ದು, ತಾವೂ ಸಹ ಅದಕ್ಕೆ ಬದ್ಧರಾಗಿರುವುದಾಗಿ ಹೇಳಿದರು. ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ನಿಂದ ವೈಯಕ್ತಿಕವಾಗಿ ಯಾವುದೇ ಮಾಹಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ವಿರೋಧ ಪಕ್ಷದ ನಾಯಕರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಸವದಿ, ವಿರೋಧ ಪಕ್ಷ ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ. ಆದರೆ, ಹಿಂದಿನ ಆಡಳಿತದ ಅವಧಿಯಲ್ಲಿ ನಡೆದ ಬೆಳವಣಿಗೆಗಳನ್ನು ಪರಿಶೀಲಿಸಿದರೆ ಹಲವು ವಿಷಯಗಳ ಬಗ್ಗೆ ಸ್ಪಷ್ಟ ಅರಿವು ಮೂಡುತ್ತದೆ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು.
ಸಚಿವ ಸ್ಥಾನಗಳ ಹಂಚಿಕೆ ಕುರಿತು ಮಾತನಾಡಿದ ಅವರು, ಹಿಂದೆ ಒಂದೇ ಸಮುದಾಯದ ಹಲವು ನಾಯಕರಿಗೆ ಸಚಿವ ಸ್ಥಾನ ನೀಡಿದ ಉದಾಹರಣೆಗಳಿವೆ. ರಾಜ್ಯದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಬೆಳಗಾವಿಗೆ ಅದರ ರಾಜಕೀಯ ಮಹತ್ವಕ್ಕೆ ಅನುಗುಣವಾಗಿ ಹೆಚ್ಚಿನ ಸಚಿವ ಸ್ಥಾನಗಳನ್ನು ನೀಡುವಲ್ಲಿ ತಪ್ಪಿಲ್ಲ. ಕನಿಷ್ಠ ಮೂರು ಸ್ಥಾನಗಳಾದರೂ ದೊರೆಯಬೇಕು ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಹಾಗೂ ಸ್ಥಾನ ಹಂಚಿಕೆ ಕುರಿತ ಗೊಂದಲಗಳಿಗೆ ಮುಂದಿನ ಕೆಲವೇ ದಿನಗಳಲ್ಲಿ ತೆರೆ ಬೀಳಲಿದ್ದು, ಹೈಕಮಾಂಡ್‌ನ ಅಂತಿಮ ತೀರ್ಮಾನವೇ ಎಲ್ಲರಿಗೂ ಮಾನ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸವದಿ, ಅವರು ಎಲ್ಲರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಸರಳ ವ್ಯಕ್ತಿತ್ವದ ಮಹಿಳೆಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು.