ಚಿತ್ರದುರ್ಗ, ಜು. 18:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದ ಭೋವಿ ಮಠದಲ್ಲಿ ಭೋವಿ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ವಧುವರ ಸಮಾವೇಶವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಗಣ್ಯರು ಹಾಗೂ ಸಾವಿರಾರು ಭಕ್ತರು ಭಾಗವಹಿಸಿ ಶ್ರೀಗಳನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಮ್ಮ ಜನ್ಮದಿನವನ್ನು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು. ಅಲ್ಪ ವಯಸ್ಸಿನಲ್ಲಿಯೇ ಸಮಾಜದ ಅಭಿವೃದ್ಧಿ, ಶಿಕ್ಷಣ ಹಾಗೂ ಸಂಘಟನೆಯ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆ ಗಮನಾರ್ಹವಾಗಿದ್ದು, ಭೋವಿ ಸಮುದಾಯವನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಪ್ರಶಂಸಿಸಿದರು.
ಸಮುದಾಯದ ಯುವಜನತೆ ಹಾಗೂ ವಿದ್ಯಾರ್ಥಿಗಳು ಶ್ರೀಗಳ ಮಾರ್ಗದರ್ಶನದಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜಕ್ಕೆ ಸೇವೆ ಸಲ್ಲಿಸುವಂತಾಗಬೇಕು ಎಂದು ಅವರು ಕರೆ ನೀಡಿದರು. ವಿವಿಧ ಸಮುದಾಯಗಳ ನಡುವೆ ಸೌಹಾರ್ದತೆ ಮತ್ತು ಸಹೋದರತ್ವದ ಭಾವನೆ ಬೆಳೆಸುವಲ್ಲಿ ಶ್ರೀಗಳ ಕೊಡುಗೆ ಶ್ಲಾಘನೀಯವಾಗಿದೆ ಎಂದರು.
ಕುಂಚಿಟಿಗ ಮಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಶ್ರೀ ಶಾಂತವೀರ ಸ್ವಾಮೀಜಿ ಅವರ ನಡುವಿನ ಬಾಂಧವ್ಯ ಸಮಾಜದ ಸಂಘಟನೆ ಮತ್ತು ಅಭಿವೃದ್ಧಿಗೆ ಮಾದರಿಯಾಗಿದೆ ಎಂದು ಹೇಳಿದರು. ಪರಸ್ಪರ ಸಹಕಾರ ಮತ್ತು ಮಾರ್ಗದರ್ಶನದ ಮೂಲಕ ಸಮಾಜವನ್ನು ಬಲಪಡಿಸುವ ಕಾರ್ಯವನ್ನು ಇಬ್ಬರೂ ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 60ಕ್ಕೂ ಹೆಚ್ಚು ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು. ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.