ನವದೆಹಲಿ: ಭಾರತೀಯ ಜನತಾ ಪಕ್ಷದ (BJP) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿರುವ ನಬಿನ್, ಕೇವಲ 45ನೇ ವಯಸ್ಸಿಗೆ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡ ಬಳಿಕ ನಡೆದ ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ನಬಿನ್ ಅವರು ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಶುಭಾಶಯ ಕೋರಿದರು.
https://twitter.com/i/broadcasts/1ynKOMZzqWWJR
ಅಧಿಕೃತ ಘೋಷಣೆ
ಬಿಜೆಪಿಯ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ನಿತಿನ್ ನಬಿನ್ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಇದಕ್ಕೂ ಮೊದಲು ನಬಿನ್ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರಾಗಿ ನೇಮಿಸಲಾಗಿತ್ತು.
ಸಚಿವ ಸ್ಥಾನಕ್ಕೆ ರಾಜೀನಾಮೆ
ಪಕ್ಷದ ನೂತನ ಹುದ್ದೆಗೆ ಸ್ಪರ್ಧಿಸುವ ಮೊದಲು ನಿತಿನ್ ನಬಿನ್ ಅವರು ಬಿಹಾರ ಸರ್ಕಾರದ ಕಾನೂನು ಮತ್ತು ನ್ಯಾಯ ಹಾಗೂ ವಸತಿ ಖಾತೆ ಸಚಿವ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದು ಪಕ್ಷದ ಜವಾಬ್ದಾರಿಯನ್ನು ಸಂಪೂರ್ಣವಾಗಿ ಹೊರುವ ನಿಟ್ಟಿನಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರವೆಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ನಿತಿನ್ ನಬಿನ್ ಯಾರು?
ನಿತಿನ್ ನಬಿನ್ ಅವರು ಬಿಹಾರ ಬಿಜೆಪಿಯ ಹಿರಿಯ ನಾಯಕ ಹಾಗೂ ಪಾಟ್ನಾದಿಂದ ನಾಲ್ಕು ಬಾರಿ ಶಾಸಕರಾಗಿದ್ದ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿಂಹ ಅವರ ಪುತ್ರ. ತಂದೆಯ ನಿಧನದ ಬಳಿಕ ಬಿಹಾರ ಬಿಜೆಪಿಯಲ್ಲಿ ಅವರು ಶಕ್ತಿಶಾಲಿ ಮತ್ತು ಪ್ರಭಾವಿ ನಾಯಕರಾಗಿ ಬೆಳದಿದ್ದಾರೆ.
ಆರ್‌ಎಸ್‌ಎಸ್ ಜೊತೆ ನಿಕಟ ಸಂಬಂಧ ಹೊಂದಿರುವ ನಬಿನ್, ಸಂಘಟನಾ ಚತುರ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಉನ್ನತ ನಾಯಕತ್ವದವರೆಗೆ ಸಂಪರ್ಕ ಹೊಂದಿರುವ ಅವರ ನಾಯಕತ್ವದಿಂದ ಮುಂದಿನ ದಿನಗಳಲ್ಲಿ ಬಿಜೆಪಿಯ ಸಂಘಟನಾ ಬಲ ಮತ್ತಷ್ಟು ಗಟ್ಟಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
Views: 38