ಕರ್ನಾಟಕ ದ್ವೇಷ ಭಾಷಣ ಕಾಯಿದೆ 2025 ವಿರೋಧಿಸಿ ಒನಕೆ ಓಬವ್ವ ವೃತ್ತದಲ್ಲಿ ಬಿಜೆಪಿ ಧರಣಿ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಡಿ. 24

ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರೋಧಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಜನತಾ ಪಾರ್ಟಿಯ ಚಿತ್ರದುರ್ಗ ನಗರ ಮಂಡಲದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಧಿಕ್ಕಾರವನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೇಸ್ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದು ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19(1)ಪರಿಚ್ಛೇದ,(2)ಪರಿಚ್ಛೇದದಡಿ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಅಲ್ಲದೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಯಾದವ್ ಮಾತನಾಡಿ, ಈ ವಿಧೇಯಕ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದು ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಹರಿಹಾಯ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಮಾತನಾಡಿ, ಈ ಕಾಯ್ದೆ ಜಾರಿಯಾಗುವುದರಿಂದ ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲ, ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ ಈ ಕಾನೂನಿನಿಂದ ಆಗಲಿದ್ದು, ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ? ಎಂಬ ಪ್ರಶ್ನೆ ಮೂಡಿದೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜನತಾ ಪಾರ್ಟಿಯ ಚಿತ್ರದುರ್ಗ ನಗರ ಮಂಡಲದ ಅಧ್ಯಕ್ಷರಾದ ಹೆಚ್.ಎನ್. ಲೋಕೇಶ್ ಮಾತನಾಡಿ ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸದಂತೆ ಮನವಿ ಮಾಡಲಾಗುತ್ತಿದೆ. ಇದು ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಇದು, ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದಿದ್ದಾರೆ.

ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ಶ್ಯಾಮಲಾ ಶಿವಪ್ರಕಾಶ್ ಮಾತನಾಡಿ, ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಇದು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳು ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದು ಬಿಜೆಪಿ ತಿಳಿಸುತ್ತದೆ ಎಂದರು.

ಪ್ರತಿಭಟನೆಯಲ್ಲಿ ಜನತಾ ಪಾರ್ಟಿಯ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಜಿಲ್ಲಾ ಕಾರ್ಯದರ್ಶಿ ರಜನಿ, ರೇಖಾ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪಾಲಯ್ಯ, ಗ್ರಾಮಾಂತರ ಮಾಜಿ ಅಧ್ಯಕ್ಷ ಕಲ್ಲೇಶಯ್ಯ, ಸಿಂಧುತನಯ, ಲಿಂಗರಾಜು, ಬಸವೇಶ್, ಲಕ್ಷ್ಮೀ ನರಸಿಂಹಸ್ವಾಮಿ, ಕವಿತ ಜವಳಿ, ಬಸುರಾಜ್, ಮಂತೇಶ್, ಮಲ್ಲಿಕಾರ್ಜನ್ ಚಿನಪ್ಪ, ನಾಗರಾಜ್, ಪಾಲಯ್ಯ, ಬೋಮಣ್ಣ, ಸುಮಾ ಭಾರತಿ ಹರೀಶ್, ವಸಂತಾಚಾರ್, ಶಾಂತಮ್ಮ, ಕಿರಣ್, ರಂಗಸ್ವಾಮಿ, ಶಶೀಧರ್, ವಿಜಯಕುಮಾರ್, ಅಣ್ಣಪ್ಪ, ಪಲ್ಲವಿ ಪ್ರಸನ್ನ ಸೇರಿದಂತೆ ವಿವಿಧ ಮೋರ್ಚಾಗಳ ಕಾರ್ಯಕರ್ತರು ಭಾಗವಹಿಸಿದ್ದರು.

Views: 48

Leave a Reply

Your email address will not be published. Required fields are marked *