ಪಂಚರಾಜ್ಯ ಚುನಾವಣೆ: ಬಿಜೆಪಿ ಗೆಲುವಿಗೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ.

ಚಿತ್ರದುರ್ಗ, ಮೇ 05:
ದೇಶದ ಪಂಚರಾಜ್ಯಗಳಲ್ಲಿ ನಡೆದ ಚುನಾವಣಾ ಫಲಿತಾಂಶಗಳಲ್ಲಿ ಭಾರತೀಯ ಜನತಾ ಪಾರ್ಟಿ ಗಮನಾರ್ಹ ಸಾಧನೆ ಮಾಡಿದ್ದು, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ದೊರೆತ ಗೆಲುವಿನ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಭರ್ಜರಿ ಸಂಭ್ರಮಾಚರಣೆ ನಡೆಯಿತು.


ನಗರದ ಮದಕರಿ ವೃತ್ತದಲ್ಲಿ ಸೋಮವಾರ ಸಂಜೆ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ, ಜಯಘೋಷಗಳನ್ನು ಕೂಗಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿಕೊಂಡು ವಿಜಯೋತ್ಸವವನ್ನು ಆಚರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಅವರು, ವಿವಿಧ ರಾಜ್ಯಗಳಲ್ಲಿ ಪಕ್ಷದ ಕಾರ್ಯಕರ್ತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳದಲ್ಲಿ ಮತದಾರರು ಸರ್ಕಾರದ ಆಡಳಿತದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.


ಅಸ್ಸಾಂನಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಜನಪರ ಆಡಳಿತದಿಂದಾಗಿ ಜನರು ಮತ್ತೆ ಬಿಜೆಪಿಯನ್ನು ಆರಿಸಿಕೊಂಡಿದ್ದು, ಪಕ್ಷವು ಹ್ಯಾಟ್ರಿಕ್ ಸಾಧಿಸಿದೆ ಎಂದು ತಿಳಿಸಿದರು. ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಇದು ಪಕ್ಷದ ಮತ್ತೊಂದು ಸಾಧನೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎ.ಎಸ್. ಪಾಟೀಲ್, ರಾಜ್ಯ ಓಬಿಸಿ ಅಧ್ಯಕ್ಷ ರಘು ಕೌಟಿಲ್ಯ, ಉಪಾಧ್ಯಕ್ಷ ಆಶ್ವಿನಿ ಶಂಕರ್ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *