ಸಮಗ್ರ ಸುದ್ದಿ, ಚಿತ್ರದುರ್ಗ, ಮೇ. 10 : ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಕರ್ನಾಟಕ ಸರ್ಕಾರ ತೀವ್ರ ಸಂತಾಪ ಸೂಚಿಸಿದೆ.ಅವರ ಗೌರವಾರ್ಥವಾಗಿ ಚಿತ್ರದುರ್ಗ ಜಿಲ್ಲೆಗೆ ಅನ್ವಯವಾಗುವಂತೆ ನಾಳೆ (ಮೇ 11, ಸೋಮವಾರ) ಸಾರ್ವಜನಿಕ ಸರ್ಕಾರಿ ಕಚೇರಿಗಳು ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಅನುದಾನ ಪಡೆಯುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೂ ಈ ರಜೆ ಅನ್ವಯವಾಗಲಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.ಇದೇ ವೇಳೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದ್ದು, ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ಸೂಚಿಸಲಾಗಿದೆ.
ಸರ್ಕಾರದ ಆದೇಶದಂತೆ, ನಿಯತವಾಗಿ ರಾಷ್ಟ್ರಧ್ವಜ ಹಾರಿಸುವ ಸರ್ಕಾರಿ ಕಟ್ಟಡಗಳ ಮೇಲೆ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಡಿ. ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.



