ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಗುಡ್ನ್ಯೂಸ್ ನೀಡಿದ್ದಾರೆ. ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಬೆಂಗಳೂರು, (ಜುಲೈ 15): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಂದು(ಜುಲೈ 15) ನಡೆದ ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದ್ದು, ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಜಾಸ್ತಿಯಾಗಲಿದೆ.
ಶೇ 27.5 ವೇತನ ಪರಿಷ್ಕರಣೆ ಮಾಡಿದ ವರದಿಯನ್ನು ಮಾರ್ಚ್ 16 ರಂದು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ಸಿಎಂ ಸಿದ್ದರಾಮಯ್ಯನವರಿಗೆ ನೀಡಿತ್ತು. ಬಳಿಕ ಸಿಎಂ, ಇದನ್ನು ಜಾರಿ ತರುವ ಬಗ್ಗೆ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ. ಇಂದು(ಜುಲೈ 15) ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ನಿರ್ಧಾರವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಂಡಿರಲಿಲ್ಲ. ಅಲ್ಲದೇ ಸಂಪನ್ಮೂಲ ಕೊರತೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ತೀರ್ಮಾನವನ್ನು ರಾಜ್ಯ ಸರ್ಕಾರ ಮುಂದೂಡುತ್ತಾ ಬಂದಿತ್ತು.