ಚಿತ್ರದುರ್ಗ ಜು 29
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ತಲುಪಿಸುವುದು ರೋಟರಿ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಎಂದು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ರೋಟರಿ ಕ್ಲಬ್ ಆಫ್ ಚಿತ್ರದುರ್ಗ, ರೋಟರಿ ಸೇವಾದಳ ತುರುವನೂರು, ಪ್ರಾಥಮಿಕ ಆರೋಗ್ಯ ಕೇಂದ್ರ ತುರುವನೂರು ಹಾಗೂ ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ತುರುವನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಂಡರೆ ಅನೇಕ ದೃಷ್ಟಿ ಸಮಸ್ಯೆಗಳನ್ನು ತಡೆಯಲು ಸಾಧ್ಯವಾಗುತ್ತದೆ. ಇಂತಹ ಜನೋಪಯೋಗಿ ಆರೋಗ್ಯ ಸೇವಾ ಕಾರ್ಯಕ್ರಮಗಳು ಸಮಾಜದಲ್ಲಿ ಉತ್ತಮ ಬದಲಾವಣೆಯನ್ನು ತರಲಿವೆ ಎಂದು ತಿಳಿಸಿದರು.
ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗದ ನೇತ್ರ ತಜ್ಞರಾದ ಡಾ. ಸಜನಾ ಮಾತನಾಡಿ, ಕಣ್ಣಿನ ಆರೈಕೆಯ ಮಹತ್ವ, ಮಧುಮೇಹ ಮತ್ತು ವಯೋಸಹಜ ಸಮಸ್ಯೆಗಳಿಂದ ಉಂಟಾಗುವ ಕಣ್ಣಿನ ತೊಂದರೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ತಪಾಸಣೆಗೊಳಗಾದ ಅಗತ್ಯವಿರುವ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆಯ ಸೌಲಭ್ಯವನ್ನು ಆಸ್ಪತ್ರೆಯ ವತಿಯಿಂದ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ, ತುರುವನೂರಿನ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ದಶರಥ್ ಮಾತನಾಡಿ, ಸಾರ್ವಜನಿಕರು ಆರೋಗ್ಯ ತಪಾಸಣೆ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಆರೋಗ್ಯ ಇಲಾಖೆಯೊಂದಿಗೆ ಸಮಾಜಮುಖಿ ಸಂಸ್ಥೆಗಳ ಸಹಭಾಗಿತ್ವದಿಂದ ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಕಾರ್ಯದರ್ಶಿ ರೋಟೇರಿಯನ್ ಮಂಜುನಾಥ್ ಕೆ.ಜಿ, ಎಸ್.ಆರ್.ಬಿ.ಎಂ.ಎಸ್. ರೋಟೇರಿಯನ್ ವೀರೇಶ್ ಎಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ನಾಗೇಂದ್ರಪ್ಪ, ಕೆ.ಪಿ. ಭೀಮಣ್ಣ, ಹನುಮಂತ ರೆಡ್ಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಶಿಬಿರದಲ್ಲಿ ನೂರಾರು ಸಾರ್ವಜನಿಕರು ತಮ್ಮ ಕಣ್ಣಿನ ತಪಾಸಣೆ ಮಾಡಿಸಿಕೊಂಡು, ಅಗತ್ಯವಿರುವವರಿಗೆ ಮುಂದಿನ ಚಿಕಿತ್ಸೆ ಹಾಗೂ ಉಚಿತ ಶಸ್ತ್ರಚಿಕಿತ್ಸೆಗೆ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಗ್ರಾಮೀಣ ಜನರಿಂದ ಶಿಬಿರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j