3 ಸಾವಿರ ಮನೆಗಳ ಮಂಜೂರು, 17,434 ನಿವೇಶನಗಳ ಹಂಚಿಕೆಗೆ ಕ್ರಮ – ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಬಿಡುಗಡೆ ಮಾಡುವಂತೆ ಬಿಜೆಪಿಗೆ ಸವಾಲು
ಹಿರಿಯೂರು, ನ. 21: ಹಿರಿಯೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ₹2 ಸಾವಿರ ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ. 3 ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿದ್ದು, 1,087 ಎಕರೆ ಜಮೀನು ಗುರುತಿಸಿ 17,434 ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಹಿರಿಯೂರಿನಲ್ಲಿ ಶನಿವಾರ ನಡೆದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳು ಮತ್ತು ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.
ದಳ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ
ದಳ ಮತ್ತು ಬಿಜೆಪಿ ನಾಯಕರು ಜನರ ಮನೆ ಬಾಗಿಲಿಗೆ ಬಂದಾಗ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಪ್ರಶ್ನಿಸಬೇಕು ಎಂದು ಕರೆ ನೀಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಸರ್ಕಾರ ಜನರ ಮನೆ ಬಾಗಿಲಿಗೆ ತೆರಳಿ ಅವರಿಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಘೋಷಣೆಯಾಗಿರುವ ₹5,300 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸುವಂತೆ ಬಿಜೆಪಿಗೆ ಸವಾಲು ಹಾಕಿದರು. ಹಿರಿಯೂರು ಭಾಗಕ್ಕೆ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹರಿಸುವ ಮೂಲಕ ಬರದ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಭೂಮಿ, ನೀರು ಮತ್ತು ಬದುಕಿನ ಭರವಸೆಯನ್ನೂ ಸರ್ಕಾರ ನೀಡುತ್ತಿದೆ ಎಂದು ಹೇಳಿದರು.
ಸರ್ಕಾರದಿಂದ ಕ್ಷೇತ್ರಕ್ಕೆ ದೊರೆತಿರುವ ಅಭಿವೃದ್ಧಿ ಕೊಡುಗೆಗಳನ್ನು ಗಮನಿಸಿ ಹಿರಿಯೂರಿನ ಜನತೆ ತಮ್ಮನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಮಹಿಳೆಯರ ಹೆಸರಿಗೆ ನಿವೇಶನ
ಕುಟುಂಬದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿರುವುದರಿಂದ 30×40 ಅಳತೆಯ ನಿವೇಶನಗಳನ್ನು ಕುಟುಂಬದ ಮಹಿಳೆಯರ ಹೆಸರಿಗೆ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಹಿರಿಯೂರು ಕ್ಷೇತ್ರವು ತಮ್ಮ ಆತ್ಮೀಯ ಗೆಳೆಯರಾಗಿದ್ದ ಸುಧಾಕರ್ ಅವರ ಕ್ಷೇತ್ರವಾಗಿದ್ದು, ಅವರು ಕಂಡ ಕನಸುಗಳು ನನಸಾಗಬೇಕು ಎಂಬ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವುದಾಗಿ ಹೇಳಿದರು.
ಚಿತ್ರದುರ್ಗ ಜಿಲ್ಲೆಯ 2,900 ಅರ್ಜಿಗಳಿಗೆ ಪರಿಹಾರ
ಚಿತ್ರದುರ್ಗ ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಪ್ರಜಾಸೇವೆ ಕಾರ್ಯಕ್ರಮದಡಿ 3,737 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅವುಗಳಲ್ಲಿ 2,900 ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಜನರ ಸಂಕಷ್ಟಗಳಿಗೆ ಸ್ಪಂದಿಸುವುದೇ ನಿಜವಾದ ಸೇವೆ. ಪ್ರಜಾಸೇವೆ ಎಂದರೆ ಕೇವಲ ದಾನ-ಧರ್ಮವಲ್ಲ; ಅದು ಜನರ ಬದುಕಿನ ಹೊಣೆಗಾರಿಕೆಯಾಗಿದೆ. ಸತ್ಯ, ಶಿಸ್ತು, ನೀತಿ ಮತ್ತು ಪ್ರಾಮಾಣಿಕತೆಯೇ ಪ್ರಜಾಸೇವೆಯ ಮೂಲ ತತ್ವಗಳು ಎಂದು ಹೇಳಿದರು.
16 ಕೆರೆಗಳ ಭರ್ತಿಗೆ ₹244 ಕೋಟಿ ಅನುದಾನ
ಭದ್ರಾ ಮೇಲ್ದಂಡೆ ಯೋಜನೆಯಡಿ ವಿಶ್ವೇಶ್ವರಯ್ಯ ಜಲ ನಿಗಮದಿಂದ ₹1,742 ಕೋಟಿ ವೆಚ್ಚದಲ್ಲಿ ಕೆರೆಗಳನ್ನು ತುಂಬಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯ 16 ಕೆರೆಗಳ ಭರ್ತಿಗೆ ₹244 ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಕಳೆದ ತಿಂಗಳು ಐತಿಹಾಸಿಕ ಗೋನೂರು ಕೆರೆಯನ್ನು ತುಂಬಿಸುವ ಮೂಲಕ ನೀಡಿದ ಭರವಸೆಯನ್ನು ಈಡೇರಿಸಲಾಗಿದೆ. ನಾಲ್ಕು ಜಿಲ್ಲೆಗಳ 13 ತಾಲ್ಲೂಕುಗಳ 367 ಕೆರೆಗಳಿಗೆ ಭದ್ರಾ ನೀರು ಹರಿಸುವ ಯೋಜನೆಯಿಂದ ಸುಮಾರು 74.26 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.
ಹಿರಿಯೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಹಿರಿಯೂರು ನಗರದ ದಕ್ಷಿಣ ಭಾಗಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಮೊದಲ ಹಂತದ ₹100 ಕೋಟಿ ವೆಚ್ಚದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗೆ ₹50 ಕೋಟಿ ಹಾಗೂ ಪರಿಶಿಷ್ಟ ಪಂಗಡಗಳ ಕಾಲೋನಿಗಳ ಅಭಿವೃದ್ಧಿಗೆ ₹10 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಹಿರಿಯೂರು ಪಟ್ಟಣದಲ್ಲಿ ₹12.65 ಕೋಟಿ ವೆಚ್ಚದಲ್ಲಿ ಡಾ. ಬಾಬು ಜಗಜೀವನ ರಾಂ, ಛಲವಾದಿ ಮತ್ತು ಭೋವಿ ಭವನಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ₹5 ಕೋಟಿ ವೆಚ್ಚದಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೂ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಧರ್ಮಪುರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಕ್ಷೇತ್ರದ ಧಾರ್ಮಿಕ ಕ್ಷೇತ್ರಗಳು ಮತ್ತು ದೇವಸ್ಥಾನಗಳ ಅಭಿವೃದ್ಧಿಗೆ ₹10 ಕೋಟಿ ಅನುದಾನ ನೀಡಲಾಗಿದೆ. 2026-27ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ₹20 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಹಿರಿಯೂರು ಕ್ಷೇತ್ರದಲ್ಲಿ ವಸತಿ, ನಿವೇಶನ, ನೀರಾವರಿ, ಒಳಚರಂಡಿ ಮತ್ತು ಸಾಮಾಜಿಕ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ ಎಂದು ಅವರು ಹೇಳಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು