India vs England, 5th Test: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿದರೆ, ಉಳಿದ ನಾಲ್ಕು ಪಂದ್ಯಗಳಲ್ಲಿ ಆಂಗ್ಲರನ್ನು ಬಗ್ಗು ಬಡಿದು ಸರಣಿ ವಶಪಡಿಸಿಕೊಳ್ಳುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

ಧರ್ಮಶಾಲಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ (Team India) ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರ ಝಾಕ್ ಕ್ರಾಲಿ (79) ಅರ್ಧಶತಕ ಬಾರಿಸಿ ಮಿಂಚಿದ್ದರು.
ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಕುಲ್ದೀಪ್ ಯಾದವ್ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ದಾಳಿಗೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಇಂಗ್ಲೆಂಡ್ ಮೊದಲ ಇನಿಂಗ್ಸ್ನಲ್ಲಿ 218 ರನ್ಗಳಿಸಲಷ್ಟೇ ಶಕ್ತರಾದರು. ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 5 ವಿಕೆಟ್ ಕಬಳಿಸಿದರೆ, ಅಶ್ವಿನ್ 4 ವಿಕೆಟ್ ಪಡೆದರು.
ಇಂಗ್ಲೆಂಡ್ ಆಲೌಟ್ ಆದ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 104 ರನ್ ಪೇರಿಸಿ ಜೈಸ್ವಾಲ್ (57) ಔಟಾದರು. ಇನ್ನು ರೋಹಿತ್ ಶರ್ಮಾ (103) ಹಾಗೂ ಶುಭ್ಮನ್ ಗಿಲ್ (110) ಭರ್ಜರಿ ಶತಕ ಸಿಡಿಸಿದರು.
ಆ ಬಳಿಕ ಬಂದ ದೇವದತ್ ಪಡಿಕ್ಕಲ್ (65) ಹಾಗೂ ಸರ್ಫರಾಝ್ ಖಾನ್ (56) ಅರ್ಧಶತಕ ಬಾರಿಸಿ ಮಿಂಚಿದರು. ಪರಿಣಾಮ 2ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ ಸ್ಕೋರ್ 450 ರನ್ಗಳ ಗಡಿ ದಾಟಿತು. ಮೂರನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಕುಲ್ದೀಪ್ ಯಾದವ್ (30) ಹಾಗೂ ಜಸ್ಪ್ರೀತ್ ಬುಮ್ರಾ 20 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಮೊದಲ ಇನಿಂಗ್ಸ್ನಲ್ಲಿ 477 ರನ್ ಕಲೆಹಾಕಿ ಟೀಮ್ ಇಂಡಿಯಾ 259 ರನ್ಗಳ ಮುನ್ನಡೆ ಪಡೆಯಿತು.
ದ್ವಿತೀಯ ಇನಿಂಗ್ಸ್:
259 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ರವಿಚಂದ್ರನ್ ಅಶ್ವಿನ್ ಆಘಾತ ನೀಡಿದರು. ಪರಿಣಾಮ 103 ರನ್ ಕಲೆಹಾಕುವಷ್ಟರಲ್ಲಿ ಇಂಗ್ಲೆಂಡ್ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತು ಆಡಿದ ಜೋ ರೂಟ್ (84) ಅರ್ಧಶತಕ ಬಾರಿಸಿ ಮಿಂಚಿದರು.
ಆದರೆ ಮತ್ತೊಂದೆಡೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಇಂಗ್ಲೆಂಡ್ ತಂಡವು 195 ರನ್ಗಳಿಗೆ ಆಲೌಟ್ ಆಗುವ ಮೂಲಕ ಇನಿಂಗ್ಸ್ ಹಾಗೂ 64 ರನ್ಗಳಿಂದ ಸೋಲೊಪ್ಪಿಕೊಂಡಿದೆ. ಈ ಭರ್ಜರಿ ಗೆಲುವಿನ ಮೂಲಕ ಐದು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ದ್ವಿತೀಯ ಇನಿಂಗ್ಸ್ನಲ್ಲಿ ಅಶ್ವಿನ್ 5 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1