IPL 2026: ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್‌ಗೆ 82 ರನ್‌ಗಳ ಭರ್ಜರಿ ಜಯ; ಪ್ಲೇಆಫ್‌ಗೆ ಲಗ್ಗೆ ಇಟ್ಟ GT

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ 56ನೇ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ ಗುಜರಾತ್ ಟೈಟಾನ್ಸ್ (GT) ತಂಡವು, ಸನ್​ರೈಸರ್ಸ್ ಹೈದರಾಬಾದ್ (SRH) ವಿರುದ್ಧ 82 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ಪಡೆ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದು, ಪ್ಲೇಆಫ್ (Playoffs) ಹಾದಿಯನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ 168 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು.

ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್ ಆಸರೆ: ಮೊದಲು ಬ್ಯಾಟಿಂಗ್ ಆರಂಭಿಸಿದ ಗುಜರಾತ್ ಟೈಟಾನ್ಸ್ ತಂಡ ನಿರೀಕ್ಷಿತ ಆರಂಭ ಪಡೆಯಲು ವಿಫಲವಾಯಿತು. ಆದರೆ, ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಜವಾಬ್ದಾರಿಯುತ ಆಟವಾಡಿ ತಂಡಕ್ಕೆ ಆಸರೆಯಾದರು. ಅತ್ಯುತ್ತಮ ಇನಿಂಗ್ಸ್ ಕಟ್ಟಿದ ಅವರು 42 ಎಸೆತಗಳಲ್ಲಿ 61 ರನ್ ಸಿಡಿಸಿ ಮಿಂಚಿದರು. ಇನಿಂಗ್ಸ್‌ನ ಅಂತಿಮ ಓವರ್‌ಗಳಲ್ಲಿ ಅಬ್ಬರಿಸಿದ ವಾಷಿಂಗ್ಟನ್ ಸುಂದರ್ ಕೇವಲ 33 ಎಸೆತಗಳಲ್ಲಿ 50 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 168ಕ್ಕೆ ತಂದು ನಿಲ್ಲಿಸಿದರು.

86 ರನ್‌ಗಳಿಗೆ ಆಲೌಟ್ ಆದ ಹೈದರಾಬಾದ್: 169 ರನ್‌ಗಳ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಮೊದಲ ಓವರ್‌ನಲ್ಲೇ ಆಘಾತ ಎದುರಾಯಿತು. ಗುಜರಾತ್ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಮೊದಲ ಓವರ್‌ನಲ್ಲೇ ಅಪಾಯಕಾರಿ ಟ್ರಾವಿಸ್ ಹೆಡ್ (0) ಅವರನ್ನು ಪೆವಿಲಿಯನ್‌ಗೆ ಅಟ್ಟುವಲ್ಲಿ ಯಶಸ್ವಿಯಾದರು.

ಇದರ ಬೆನ್ನಲ್ಲೇ ದಾಳಿಗಿಳಿದ ಕಗಿಸೊ ರಬಾಡ ಅವರ ಕರಾರುವಾಕ್ ಎಸೆತಗಳಿಗೆ ಸಿಲುಕಿ ಅಭಿಷೇಕ್ ಶರ್ಮಾ (6 ರನ್) ಹಾಗೂ ಇಶಾನ್ ಕಿಶನ್ (11 ರನ್) ವಿಕೆಟ್ ಒಪ್ಪಿಸಿದರು. ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಸ್ಮರಣ್ ರವಿಚಂದ್ರನ್ (9), ಸಲೀಲ್ ಅರೋರಾ (16) ಹಾಗೂ ಸ್ಫೋಟಕ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಕೂಡ ವಿಕೆಟ್ ಕೈಚೆಲ್ಲಿದರು.

ಆ ಬಳಿಕ ಬಂದ ನಿತೀಶ್ ಕುಮಾರ್ ರೆಡ್ಡಿ (2) ನಿರಾಸೆ ಮೂಡಿಸಿದರೆ, ನಾಯಕ ಪ್ಯಾಟ್ ಕಮಿನ್ಸ್ 19 ರನ್ ಗಳಿಸಿ ಇನಿಂಗ್ಸ್ ಕೊನೆಗೊಳಿಸಿದರು. ಅಂತಿಮವಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಕೇವಲ 14.5 ಓವರ್‌ಗಳಲ್ಲಿ 86 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಗುಜರಾತ್ ಟೈಟಾನ್ಸ್ 82 ರನ್‌ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.

ಮುಖ್ಯಾಂಶಗಳು:

  • ಅಗ್ರಸ್ಥಾನದಲ್ಲಿ ಗುಜರಾತ್: ಈ ಗೆಲುವಿನೊಂದಿಗೆ ಗುಜರಾತ್ ಟೈಟಾನ್ಸ್ ಒಟ್ಟು 16 ಅಂಕಗಳನ್ನು ಕಲೆಹಾಕಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ.
  • ಮುಖಾಮುಖಿ ದಾಖಲೆ: ಐಪಿಎಲ್ ಇತಿಹಾಸದಲ್ಲಿ ಗುಜರಾತ್ ಮತ್ತು ಹೈದರಾಬಾದ್ ತಂಡಗಳು ಈವರೆಗೆ 8 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಗುಜರಾತ್ ಟೈಟಾನ್ಸ್ ಬರೋಬ್ಬರಿ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಪ್ರಾಬಲ್ಯ ಮೆರೆದಿದೆ. ಹೈದರಾಬಾದ್ ಕೇವಲ 1 ಪಂದ್ಯದಲ್ಲಿ ಗೆದ್ದಿದ್ದರೆ, 1 ಪಂದ್ಯ ರದ್ದಾಗಿತ್ತು.

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ (Playing XI): ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಕ್ ಕ್ಲಾಸೆನ್, ಸಲೀಲ್ ಅರೋರಾ, ನಿತೀಶ್ ಕುಮಾರ್ ರೆಡ್ಡಿ, ಸ್ಮರಣ್ ರವಿಚಂದ್ರನ್, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಈಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ.

Leave a Reply

Your email address will not be published. Required fields are marked *