ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವಿರೋಧ ಆಯ್ಕೆ.

ಬೆಂಗಳೂರು, ಜ.20: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಅಂತಿಮವಾಗಿ ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ, ಈಶ್ವರ್ ಖಂಡ್ರೆ ಅವರನ್ನು 24ನೇ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿದ್ದವು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಕೂಡ ಚರ್ಚೆಯಲ್ಲಿದ್ದು, ಲಿಂಗಾಯತ ಪಂಚಪೀಠದ ಪೀಠಾಧಿಪತಿಗಳೊಬ್ಬರು ಯಡಿಯೂರಪ್ಪ ಅವರು ಅಧ್ಯಕ್ಷರಾದರೆ ಸಂತೋಷ ಎನ್ನುವ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು. ಆದರೆ, ಅಂತಿಮವಾಗಿ ಕಾರ್ಯಕಾರಿ ಸಭೆಯ ನಿರ್ಧಾರದಲ್ಲಿ ಭಾಲ್ಕಿ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಅಧ್ಯಕ್ಷ ಸ್ಥಾನ ಒಲಿದಿದೆ.

ತಂದೆಯ ಹಾದಿಯಲ್ಲಿ ಪುತ್ರ

ಈಶ್ವರ್ ಖಂಡ್ರೆ ಅವರಿಗೆ ವೀರಶೈವ ಲಿಂಗಾಯತ ಮಹಾಸಭೆಯೊಂದಿಗೆ ಕುಟುಂಬದ ನಂಟು ಕೂಡ ಇದೆ. ಈ ಹಿಂದೆ ಅವರ ತಂದೆ ಭೀಮಣ್ಣ ಖಂಡ್ರೆ ಅವರು ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ತಂದೆಯ ಹಾದಿಯಲ್ಲೇ ಈಶ್ವರ್ ಖಂಡ್ರೆ ಅವರು ಮಹಾಸಭೆಯ ನೇತೃತ್ವ ವಹಿಸಿಕೊಂಡಿದ್ದಾರೆ.

ಮಹಾಸಭೆಯ ಹಿನ್ನೆಲೆ

ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ವೀರಶೈವ–ಲಿಂಗಾಯತ ಸಮುದಾಯದ ಪ್ರಮುಖ ರಾಷ್ಟ್ರೀಯ ಸಂಸ್ಥೆಯಾಗಿದೆ. ಇತ್ತೀಚೆಗೆ ನಿಧನರಾದ ಶಾಮನೂರು ಶಿವಶಂಕರಪ್ಪ ಅವರು ಈ ಮಹಾಸಭೆಯ ಅಧ್ಯಕ್ಷರಾಗಿದ್ದರು.

ಕಾರ್ಯಕಾರಿ ಸಭೆಗೆ ಗಣ್ಯರ ಹಾಜರಿ

ನೂತನ ಅಧ್ಯಕ್ಷರ ಆಯ್ಕೆ ನಡೆದ ಕಾರ್ಯಕಾರಿ ಸಭೆಯಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ, ಕೈಗಾರಿಕೋದ್ಯಮಿ ಪ್ರಭಾಕರ್ ಕೋರೆ, ವೀರಣ್ಣ ಚರಂತಿಮಠ, ಮಾಜಿ ಸಚಿವ ರಾಜಶೇಖರ್ ಪಾಟೀಲ್ (ಹುಮ್ನಾಬಾದ್) ಸೇರಿದಂತೆ ಅನೇಕ ಪ್ರಮುಖ ನಾಯಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈಶ್ವರ್ ಖಂಡ್ರೆ ಅವರ ಆಯ್ಕೆಯಿಂದ ವೀರಶೈವ ಲಿಂಗಾಯತ ಮಹಾಸಭೆಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *