ಕೇಂದ್ರ ಬಜೆಟ್| ರೈತ ವಿರೋಧಿ, ಜನ ವಿರೋಧಿ ಬಜೆಟ್: ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಜಗದೀಶ್.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ನಗರದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಅದರಲ್ಲೂ ಕರ್ನಾಟಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಏನೇನು ಒತ್ತು ಕೊಟ್ಟಿಲ್ಲ, ಐದು ಜನ ಸಚಿವರು ಇದ್ದರೂ ಕೈಗಾರಿಕಾ, ರೈಲ್ವೆ ಸೇರಿದಂತೆ ಇತರೆ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ. ಇದು ನಿರಾಶಾದಾಯಕ, ಜನವಿರೋಧಿ ಬಜೆಟ್ ಇದಾಗಿದ್ದು, ಬಡವರಿಗೆ ಅನ್ಯಾಯ ಮಾಡಿದ್ದಾರೆ.

ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಈ ಬಜೆಟ್‌ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದು, ರೈತರು 3 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯಿದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್‌ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆ ವಿತ್ತ ಸಚಿವರು ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದ್ದಾರೆ. ಇದೊಂದು ರೈತ ವಿರೋಧಿ, ಜನ ವಿರೋಧಿ ಬಜೆಟ್ ಆಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಜಗದೀಶ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರಾಮಣ್ಣ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ತನ್ವಿರ್, ಜಿಲ್ಲಾ ಕಾರ್ಯದರ್ಶಿ ಆಕ್ಬರ್ ಖಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *