ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ. 27:
ಚಳ್ಳಕೆರೆ ತಾಲ್ಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಅಧ್ಯಕ್ಷ ಜಯ್ಯಣ್ಣ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಜಯ್ಯಣ್ಣ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಇಂದಿಗೂ ಜಾತಿ ತಾರತಮ್ಯ, ದೌರ್ಜನ್ಯ ಹಾಗೂ ಸಾಮಾಜಿಕ ಅಸಮಾನತೆ ಜೀವಂತವಾಗಿರುವುದು ಆತಂಕಕಾರಿ ವಿಷಯ ಎಂದು ಹೇಳಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನ ನೀಡಿದ ಮಹಾನ್ ನಾಯಕರು. ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧವಾಗಿದೆ ಎಂದು ಕಿಡಿಕಾರಿದ್ದಾರೆ.
ಇಂತಹ ಕೃತ್ಯ ಎಸಗಿದವರು ಯಾರೇ ಆಗಿರಲಿ, ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಯಾವುದೇ ಮಹಾಪುರುಷರ ಭಾವಚಿತ್ರಕ್ಕೆ ಅವಮಾನ ನಡೆಯದಂತೆ ಕಠಿಣ ಎಚ್ಚರಿಕೆ ಮತ್ತು ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಅವರು ಮನವಿ ಮಾಡಿದ್ದಾರೆ.
Views: 95