Virat Kohli’s Historic ODI Feat: ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.ಈ ಮೂಲಕ ಅತಿ ಕಡಿಮೆ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಅಲ್ಲದೆ ಈ ವಿಚಾರದಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

2025 ರ ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದ ಪಂದ್ಯದಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ತನ್ನ ಎರಡನೇ ಪಂದ್ಯವನ್ನು ಆಡುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡ 241 ರನ್ಗಳಿಗೆ ಆಲೌಟ್ ಆಗಿದೆ. ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾಡುತ್ತ್ತಿರುವ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಇದರ ಜೊತೆಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಸಹ ಹಿಂದಿಕ್ಕಿದ್ದಾರೆ.
ವಿರಾಟ್ ಕೊಹ್ಲಿ ಐತಿಹಾಸಿಕ ಸಾಧನೆ
ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 15 ರನ್ ಗಳಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ ವಿರಾಟ್ ಏಕದಿನ ಮಾದರಿಯಲ್ಲಿ 14 ಸಾವಿರ ರನ್ ಬಾರಿಸಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವಿರಾಟ್ಗಿಂತ ಮೊದಲು ಸಚಿನ್ ತೆಂಡೂಲ್ಕರ್ ಮತ್ತು ಶ್ರೀಲಂಕಾದ ಕುಮಾರ್ ಸಂಗಕ್ಕಾರ ಈ ಸಾಧನೆ ಮಾಡಿದ್ದಾರೆ. ಆದರೆ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ಗಳನ್ನು ವೇಗವಾಗಿ ಪೂರ್ಣಗೊಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 359ನೇ ಪಂದ್ಯದ 350ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದರೆ, ವಿರಾಟ್ ಕೊಹ್ಲಿ 299 ನೇ ಪಂದ್ಯದ 287 ನೇ ಇನ್ನಿಂಗ್ಸ್‌ನಲ್ಲಿ 14 ಸಾವಿರ ರನ್ ಪೂರೈಸಿದ್ದಾರೆ.
ವಿಶೇಷವೆಂದರೆ ವಿರಾಟ್ ಕೊಹ್ಲಿಗಿಂತ ಮೊದಲು, ಸಚಿನ್ ತೆಂಡೂಲ್ಕರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೇ ಏಕದಿನದಲ್ಲಿ 14000 ರನ್‌ಗಳನ್ನು ಪೂರ್ಣಗೊಳಿಸಿದ್ದರು. ಸಚಿನ್ ಈ ಸಾಧನೆಯನ್ನು ಫೆಬ್ರವರಿ 6, 2006 ರಂದು ಪೇಶಾವರದಲ್ಲಿ ಮಾಡಿದ್ದರು. ಈಗ ವಿರಾಟ್ ಕೊಹ್ಲಿ ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಈ ಸಾಧನೆಯನ್ನು ಪುನರಾವರ್ತಿಸಿದ್ದಾರೆ. 14 ಸಾವಿರ ಪೂರೈಸುವುದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಮೂರನೇ ಸ್ಥಾನದಲ್ಲಿದ್ದಾರೆ. ಕುಮಾರ್ ಸಂಗಕ್ಕಾರ 14234 ರನ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಸಚಿನ್ 18426 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.
ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ಶತಕ
ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಈ ಸ್ವರೂಪದಲ್ಲಿ ಅವರು ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ದಾಖಲೆಯೂ ವಿರಾಟ್ ಹೆಸರಲ್ಲಿದೆ. ಅವರು ಈ ಸ್ವರೂಪದಲ್ಲಿ ಇಲ್ಲಿಯವರೆಗೆ 50 ಶತಕಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿಯೂ ಅವರು ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ಸಚಿನ್ ತೆಂಡೂಲ್ಕರ್ ತಮ್ಮ ಏಕದಿನ ವೃತ್ತಿಜೀವನದಲ್ಲಿ 49 ಶತಕಗಳನ್ನು ಸಿಡಿಸಿದ್ದಾರೆ. ಆದರೆ 2023 ರ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಈ ದಾಖಲೆಯನ್ನು ಮುರಿದರು.