ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಲೋಕಾಯುಕ್ತ ಕ್ಲೀನ್​ ಚಿಟ್​.

MUDA CASE : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ, ಬಾಮೈದನಿಗೆ ಲೋಕಾಯುಕ್ತ ಕ್ಲೀನ್​ಚಿಟ್​ ನೀಡಿದೆ. ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದಿದೆ. ಇದಕ್ಕೆ ತಕರಾರು ಅರ್ಜಿ ಸಲ್ಲಿಸುವುದಾಗಿ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರು ಸೇರಿದಂತೆ ದಾಖಲಾಗಿದ್ದ ಪ್ರಕರಣ ಸಂಬಂಧ ಬಹುತೇಕ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ನಾಳೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಿದ್ದಾರೆ.

ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಆರೋಪಕ್ಕೆ ಪೂರಕವಾಗಿ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂದು ದೂರುದಾರರಿಗೆ ಲೋಕಾಯುಕ್ತ ನೋಟಿಸ್​ ನೀಡಿದೆ.

ಸಾಕ್ಷಿ ಕೊರತೆ ಹಿನ್ನೆಲೆಯಲ್ಲಿ ಪ್ರಕರಣದ ಬಿ- ರಿಪೋರ್ಟ್ ಸಲ್ಲಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಗುರುವಾರ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವರದಿಯನ್ನು ಅಧಿಕಾರಿಗಳು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇರೆಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ : ಮುಡಾ 50:50 ಹಗರಣ ಆರೋಪ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ “ಬಿ” ರಿರ್ಪೋಟ್‌ ಸಲ್ಲಿಸುತ್ತೇವೆ ಎಂದು ಮೈಸೂರು ಲೋಕಾಯುಕ್ತರು ನೋಟೀಸ್‌ ನೀಡಿದ್ದು, ಈ ಬಗ್ಗೆ ಒಂದು ವಾರದಲ್ಲಿ ತಕರಾರು ಅರ್ಜಿ ಸಲ್ಲಿಸುತ್ತೇನೆ ಎಂದು ದೂರುದಾರ, ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಲೋಕಾಯುಕ್ತರಿಂದ ಸಿಎಂ ಮತ್ತು ಅವರ ಪತ್ನಿ, ಬಾಮೈದನಿಗೆ ಕ್ಲೀನ್​ ನೀಡಿರುವ ಬೆನ್ನಲ್ಲೇ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರಿಯಾದ ಸಾಕ್ಷ್ಯಾಧಾರಗಳನ್ನು ನೀಡಿ ಆರೋಪ ಸಾಬೀತು ಪಡಿಸುತ್ತೇನೆ. ಒಂದು ವಾರದಲ್ಲಿ ತಕರಾರು ಅರ್ಜಿ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Source : https://www.etvbharat.com/kn/!state/muda-case-lokayukta-police-says-no-evidence-against-karnataka-cm-siddaramaiah-karnataka-news-kas25021904892

Leave a Reply

Your email address will not be published. Required fields are marked *