
ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗಳನ್ನಾಗಿ (ಎಲ್‌ಕೆಜಿ ಮತ್ತು ಯುಕೆಜಿ) ಉನ್ನತೀಕರಿಸಲು ಸರಕಾರ ಚಿಂತನೆ ನಡೆಸಿದೆ. ಸರಕಾರಿ ಶಾಲೆಗಳಂತೆ ಅಂಗನವಾಡಿ ಕೇಂದ್ರಗಳಲ್ಲೂ ಮಕ್ಕಳ ದಾಖಲಾತಿ ಪ್ರಮಾಣ ಇಳಿಕೆಯಾಗಿದೆ. ಖಾಸಗಿ ಶಾಲೆಗಳ ಪೈಪೋಟಿ ಜತೆಗೆ, ಕೆಪಿಎಸ್ ಶಾಲೆಗಳ ಆರಂಭ ಹಾಗೂ ಸರಕಾರಿ ಮಾಂಟೆಸರಿ ಆರಂಭಿಸುವ ಪ್ರಸ್ತಾಪದಿಂದ ಅಂಗನವಾಡಿ ಕೇಂದ್ರಗಳಿಗೆ ಕುತ್ತು ಬರುವ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮನವಿಯಂತೆ ಸರಕಾರ ಈ ಕುರಿತು ಗಂಭೀರ ಚಿಂತನೆ ನಡೆಸಿದೆ. ವಿಧಾನಸೌಧದಲ್ಲಿ ಸೋಮವಾರ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು. ಬಳಿಕ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, “ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ತಜ್ಞರ ಸಮಿತಿ ರಚಿಸಿ, ವರದಿ ಪಡೆದುಕೊಂಡ ಬಳಿಕ ಈ ನಿಟ್ಟಿನಲ್ಲಿ ಮುಂದು ವರಿಯಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ,” ಎಂದು ತಿಳಿಸಿದರು.
ಸಭೆಯಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಮಧು ಬಂಗಾರಪ್ಪ, ಹಿರಿಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರ ಪ್ರತಿನಿಧಿಗಳು ಭಾಗವಹಿಸಿದ್ದರು.