ಚಿತ್ರದುರ್ಗ ಆ. 11:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಕೃತಿ ವಿಕೋಪ ಹಾಗೂ ಬರ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲಾಗಿದ್ದು, ಜಿಲ್ಲಾ ಮಟ್ಟದ ಸಭೆ ನಡೆಸಿ ರಾಜ್ಯ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಸಚಿವರು, ಚಿತ್ರದುರ್ಗ ಜಿಲ್ಲಾ ಪಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವರಾದ ಟಿ.ರಘುಮೂರ್ತಿ ತಿಳಿಸಿದರು.
ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ತಮ್ಮನ್ನು ಬೇಟಿಯಾದ ಸುದ್ದಿಗಾರರೊಂದಿಗೆ ವಿವಿಧ ರಾಜಕೀಯ ಯಾತ್ರೆಗಳು, ಶಾಸಕರ ಅಸಮಾಧಾನ ಮತ್ತು ಜಿಲ್ಲೆಯ ನೀರಾವರಿ ಯೋಜನೆಗಳ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ನೀಡಿ ಸಚಿವರು ಜಿಲ್ಲೆಯ ಹಿರಿಯೂರು, ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮುರು ಹಾಗೂ ಚಿತ್ರದುರ್ಗ ತಾಲೂಕುಗಳಲ್ಲಿ ಆಗಸ್ಟ್ 5ರಿಂದ 10ರವರೆಗೆ ಪರಿಶೀಲನೆ ನಡೆಸಿ, ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿಸಲಾಗಿದೆ. ಬೆಳೆ ಹಾನಿ, ಕುಡಿಯುವ ನೀರು ಹಾಗೂ ಮೇವಿನ ಅಭಾವದ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರೋಡೀಕರಿಸಿದ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗದರ್ಶಿ ಸೂತ್ರಗಳನ್ವಯ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಬರಪೀಡಿತ ಪ್ರದೇಶ ಘೋಷಣೆಗೆ ಕ್ರಮ ವಹಿಸಲಾಗುವುದು ಜಿಲ್ಲೆಯಲ್ಲಿರುವ ಸುಮಾರು 3 ಲಕ್ಷ ರೈತರ ಪೈಕಿ 2,53,000 ರೈತರಿಗೆ ವಿವಿಧ ಬೆಳೆ ವಿಮೆ ಸೌಲಭ್ಯ ದೊರೆಯುವಂತೆ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ. ಎಂದರು.
ಮಂತ್ರಿಮಂಡಲ ರಚನೆ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ಹಿರಿಯ ನಾಯಕರು ಮತ್ತು ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷವು ಒಂದು ಕುಟುಂಬವಿದ್ದಂತೆ; ಅಭಿಪ್ರಾಯ ಭೇದಗಳಿದ್ದರೆ ವರಿಷ್ಠರು ಬಗೆಹರಿಸಲಿದ್ದಾರೆ. ವಿರೋಧ ಪಕ್ಷಗಳ ಆಮಿಷಗಳಿಗೆ ಶಾಸಕರು ಬಲಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಿಸಿತ್ತಾದರೂ ಇನ್ನೂ ಬಿಡುಗಡೆ ಮಾಡಿಲ್ಲ. ಯೋಜನೆ ವೆಚ್ಚ ಹೆಚ್ಚಾಗುತ್ತಿದ್ದು, ಶ್ರೀಗಳವರ ನಿಯೋಗ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ. ನಗರ ಪ್ರದೇಶದ ಕೆರೆಗಳ ಕಲುಷಿತಗೊಳ್ಳುವಿಕೆ ತಡೆಯಲು ಕ್ರಮ ತೆಗೆದುಕೊಳ್ಳಲಾಗುವುದು, ಜಿಲ್ಲೆಯ ಅಭಿವೃದ್ಧಿ ಹಾಗೂ ಬರ ಪರಿಹಾರ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಪಕ್ಷಾತೀತವಾಗಿ ಸಂಸದರು ಮತ್ತು ಎಲ್ಲಾ ಶಾಸಕರನ್ನು ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಸಾಂಘಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.