Nandini Milk Price Hike: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏರ್ಪಡಿಸಿದ್ದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬೆಂಗಳೂರು: ಟೊಮೇಟೊ ಸೇರಿದಂತೆ ತರಕಾರಿ, ಅಗತ್ಯವಸ್ತುಗಳು ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‍ಗೆ 3 ರೂ.ಗೆ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏರ್ಪಡಿಸಿದ್ದ ಹಾಲು ಒಕ್ಕೂಟ ಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಲಿನ ದರ ಹೆಚ್ಚಳದಿಂದ ಸಂಗ್ರಹವಾಗುವ ಹಣವನ್ನು ರೈತರಿಗೆ ವರ್ಗಾವಣೆ ಮಾಡುವುದಾಗಿ ಸರ್ಕಾರ ತಿಳಿಸಿದೆ.
ಕೆಎಂಎಫ್ ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂ. ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯನವರು ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚಳವಾದ 3 ರೂ. ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಅಂತಾ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಹಕಾರ ಸಚಿವ ರಾಜಣ್ಣ, ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ರೈತರು ಮತ್ತು ಉತ್ಪಾದಕರಿಗೆ ಅನುಕೂಲವಾಗುವಂತೆ ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಿದ್ದೇವು. ನಮ್ಮ ರಾಜ್ಯದಲ್ಲಿ ಅತಿಕಡಿಮೆ ಬೆಲೆಯಲ್ಲಿ ಹಾಲು ಮಾರಾಟ ಆಗುತ್ತೆ. ಎಲ್ಲಾ ಅಧ್ಯಕ್ಷರು, ಕೆಎಂಎಫ್ ಪದಾಧಿಕಾರಿಗಳು ಹಾಲಿನ ದರ ಹೆಚ್ಚಳಕ್ಕೆ ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು. ಸದ್ಯ 94 ಲಕ್ಷ ಲೀಟರ್‍ಗೂ ಹೆಚ್ಚು ಹಾಲು ಉತ್ಪಾದನೆ ಮಾಡಲಾಗುತ್ತಿದ್ದು, ಚಾಮರಾಜನಗರದಲ್ಲಿ ಬೈಪ್ರಾಡೆಕ್ಟ್‍ಗಳ ಉದ್ಘಾಟನೆಗೆ ಚಿಂತನೆ ನಡೆಸಲಾಗಿದೆ. ಹೀಗಾಗಿ ಎಲ್ಲಾ ಮಾದರಿಯ ಹಾಲಿಗೂ 3 ರೂ. ಏರಿಕೆ ಮಾಡಲು ತೀರ್ಮಾನಿಸಲಾಗಿದೆ’ ಎಂದು ಹೇಳಿದ್ದಾರೆ.
ಸಭೆಯಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಕೆಎಂಎಫ್ ನಿರ್ದೇಶಕ ಎಚ್.ಡಿ.ರೇವಣ್ಣ ಮುಂತಾದವರು ಭಾಗವಹಿಸಿದ್ದರು.