PDO Recruitment 2023: ವಿಧಾನಸಭಾ ಅಧಿವೇಶನದಲ್ಲಿ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದ್ದಾರೆ.
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 150 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು(PDO), 604 ಗ್ರೇಡ್-I ಮತ್ತು 719 ಗ್ರೇಡ್ -II ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹುದ್ದೆಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ 345 ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಯುತ್ತಿದೆ.
ವಿಧಾನಸಭಾ ಅಧಿವೇಶನದಲ್ಲಿ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯ್ತಿಗಳಿಗೆ 6,021 ಹುದ್ದೆಗಳು ಮಂಜೂರಾಗಿದ್ದವು. ಈ ಪೈಕಿ 5,361 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 660 ಹುದ್ದೆಗಳು ಖಾಲಿಯಿದ್ದು, ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಖರ್ಗೆ ಮಾಹಿತಿ ನೀಡಿದ್ದಾರೆ.
ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗ್ರೇಡ್-Iಗೆ 2,194 ಹುದ್ದೆಗಳು ಮಂಜೂರಾಗಿದ್ದವು. ಈ ಪೈಕಿ 1,590 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, 604 ಹುದ್ದೆಗಳು ಖಾಲಿ ಇವೆ. ಗ್ರಾಮ ಪಂಚಾಯ್ತಿ ಗ್ರೇಡ್-IIಗೆ 3,827 ಹುದ್ದೆಗಳು ಮಂಜೂರಾಗಿದ್ದವು. ಈ ಪೈಕಿ 3,108 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, 719 ಹುದ್ದೆಗಳು ಖಾಲಿ ಇವೆ. ದ್ವಿತೀಯ ದರ್ಜೆ ಲೆಕ್ಕ ಸಹಾಯಕ 2,579 ಹುದ್ದೆಗಳು ಮಂಜೂರಾಗಿದ್ದವು. ಈ ಪೈಕಿ 2,234 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, 345 ಹುದ್ದೆಗಳು ಖಾಲಿ ಇವೆ. ಈ ಎಲ್ಲಾ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.