ಬೆಂಗಳೂರು, ಡಿಸೆಂಬರ್ 14
ಕಾಂಗ್ರೆಸ್‌ನ ಹಿರಿಯ ನಾಯಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ಭಾರತದಲ್ಲೇ ಅತ್ಯಂತ ಹಿರಿಯ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂಬ ಮಾಹಿತಿ ನೀಡಲಾಗಿದ್ದರೂ, ದುರದೃಷ್ಟವಶಾತ್ ಅವರು ಇಂದು ನಿಧನರಾಗಿದ್ದಾರೆ.
ಶಿವಶಂಕರಪ್ಪ ಅವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಹಾಗೂ ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದರು. ದಾವಣಗೆರೆಯಲ್ಲಿ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಆರೋಗ್ಯ ಸುಧಾರಣೆಗೆ ಪೂಜೆ-ಪ್ರಾರ್ಥನೆಗಳನ್ನು ನಡೆಸಿದ್ದರು.
ಜೂನ್ 16, 1931ರಂದು ದಾವಣಗೆರೆಯಲ್ಲಿ ಜನಿಸಿದ ಶಾಮನೂರು ಶಿವಶಂಕರಪ್ಪ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ರಾಜಕೀಯ, ಶಿಕ್ಷಣ, ಉದ್ಯಮ ಹಾಗೂ ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಅವರು ಹಲವು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು.
1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ರಾಜಕೀಯ ಪ್ರವೇಶ ಪಡೆದ ಅವರು, 1971ರಲ್ಲಿ ಪುರಸಭೆ ಅಧ್ಯಕ್ಷರಾಗಿದರು. ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದರು. 1994ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2023ರ ವಿಧಾನಸಭೆ ಚುನಾವಣೆಯಲ್ಲಿ 57.59% ಮತಗಳೊಂದಿಗೆ ಆರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜೆಪಿ ಅಭ್ಯರ್ಥಿಯನ್ನು 27,888 ಮತಗಳ ಅಂತರದಿಂದ ಸೋಲಿಸಿದ್ದರು.
ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರಾಗಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜೊತೆಗೆ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಉದ್ಯಮಿಯಾಗಿ ಅವರು ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್ ಮೂಲಕ ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಸೇರಿದಂತೆ ಹಲವು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ಶಾಮನೂರು ಗ್ರೂಪ್ ಮೂಲಕ ಸಕ್ಕರೆ ಕಾರ್ಖಾನೆಗಳು ಮತ್ತು ಡಿಸ್ಟಿಲರಿಗಳನ್ನೂ ಮುನ್ನಡೆಸಿದ್ದರು.
ಮೃತರು ಪುತ್ರ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸೊಸೆ ಹಾಗೂ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.
Views: 36