ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಸಿಹಿಸುದ್ದಿ​: ಹಾಜರಾತಿಯಲ್ಲಿ ಭಾರೀ ವಿನಾಯಿತಿ; ಪರೀಕ್ಷೆಯಲ್ಲೂ ಸಿಗಲಿದೆ ಕೃಪಾಂಕ​!

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್​ ಮಂಡನೆ ಮಾಡಿದ್ದು ಕ್ರೀಡಾವಲಯಕ್ಕೆ ಭರ್ಜರಿ ಗಿಫ್ಟ್​ ನೀಡಿದ್ದಾರೆ.

Karnataka State Budget 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಇಂದು) ದಾಖಲೆಯ 16ನೇ ಬಜೆಟ್​ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಎಲ್ಲಾ ವಲಯಗಳಿಗೆ ಒತ್ತುಕೊಟ್ಟಿರುವ ಸಿಎಂ ಕ್ರೀಡಾಪಟುಗಳಿಗೆ ಬಂಪರ್​ ಗಿಫ್ಟ್​ ನೀಡಿದ್ದಾರೆ.

ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, ಒಲಂಪಿಕ್ಸ್ – 2028ಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು ಮೂರು ವರ್ಷ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೆ ಪ್ರಸಕ್ತ ವರ್ಷ 6 ಕೋಟಿ ರೂ. ಒದಗಿಸುವುದಾಗಿ ಬಜೆಟ್​ನಲ್ಲಿ ಮಂಡಿಸಿದ್ದಾರೆ.

ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್​: ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಅಥವಾ ತರಬೇತಿ ಪಡೆಯುವ ಶಾಲಾ-ಕಾಲೇಜುಗಳ (ವೃತ್ತಿಪರ ಕಾಲೇಜುಗಳು ಸೇರಿದಂತೆ) ವಿದ್ಯಾರ್ಥಿಗಳಿಗೆ ವಾರ್ಷಿಕ ಹಾಜರಾತಿಯಲ್ಲಿ ಶೇ.15ರಷ್ಟು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

ಇದರೊಂದಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ಶೇ.5ರಷ್ಟು ಕೃಪಾಂಕವನ್ನು ನೀಡುವುದಾಗಿ ನುಡಿದಿದ್ದಾರೆ.

ಬಜೆಟ್​ನಲ್ಲಿ ಕ್ರೀಡಾವಲಯಕ್ಕೆ ಇನ್ನು ಏನೆಲ್ಲ ಸಿಕ್ಕಿದೆ?

  • ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ.ವರೆಗೆ ನೆರವು.
  • ಬೆಂ.ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ.
  • ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ ವೆಚ್ಚ.
  • ನಿವೇಶನ ಲಭ್ಯವಿರುವ 12 ತಾಲ್ಲೂಕು ಕೇಂದ್ರಗಳಿಗೆ ತಲಾ 2 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣ. ಪ್ರಸಕ್ತ ಸಾಲಿನಲ್ಲಿ ಒಟ್ಟು 12 ಕೋಟಿ ರೂ ವೆಚ್ಚ.
  • ಆರು ಕೋಟಿ ರೂ. ಅನುದಾನದಲ್ಲಿ ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಹಾಗೂ ಟಿ.ನರಸೀಪುರ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ.
  • ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್​ಗಳ ನಿರ್ಮಾಣ.
  • ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಭ ಕ್ರೀಡೆಗಳಿಗೆ ಉತ್ತೇಜನ ನೀಡಲು ಕ್ರಮ.
  • ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಪ್ರತಿ ವರ್ಷ ಕ್ರೀಡಾಕೂಟ ಆಯೋಜಿಸಲಾಗುವುದು. 2025-26ನೇ ಸಾಲಿನಲ್ಲಿ ಈ ಉದ್ದೇಶಕ್ಕಾಗಿ 2 ಕೋಟಿ ರೂ ಒದಗಿಸಲು ಕ್ರಮ.
  • 3 ಕೋಟಿ ರೂ ವೆಚ್ಚದಲ್ಲಿ ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣ. 10 ಕೋಟಿ ರೂ. ವೆಚ್ಚದಲ್ಲಿ ಯಾದಗಿರಿಯ ಶಹಾಪುರದಲ್ಲಿ ಕ್ರೀಡಾ ವಸತಿ ಶಾಲೆ ನಿರ್ಮಾಣ.
  • 7 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಹಾಗೂ ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳ ಸ್ಥಾಪನೆ.
  • ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳವನ್ನು ಹೀಟಿಂಗ್ ಮತ್ತು ಡೈವಿಂಗ್ ವ್ಯವಸ್ಥೆಗಳನ್ನೊಳಗೊಂಡ ಅಂತಾರಾಷ್ಟ್ರೀಯ ಮಟ್ಟದ ಮೇಲ್ದರ್ಜೆಗೇರಿಸಲು ಕ್ರಮ.
  • ಚಾಮರಾಜನಗರದಲ್ಲಿ ಒಲಂಪಿಕ್ಸ್ ಮಾದರಿಯ (50 ಮೀಟರ್) ಈಜುಕೊಳವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
  • ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಬೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ ವೆಚ್ಚ
  • ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ.ಗಳಿಗೆ ಹೆಚ್ಚಳ.
  • ಒಲಂಪಿಕ್ಸ್, ಕಾಮನ್ ವೆಲ್ತ್ ಹಾಗೂ ಏಷಿಯನ್ ಗೇಮ್ಸ್​ಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲು ಕ್ರಮ.

Source : https://www.etvbharat.com/kn/!sports/karnataka-state-2025-26-budget-for-the-sports-sector-karnataka-news-kas25030703018

Leave a Reply

Your email address will not be published. Required fields are marked *