Road Accident : ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್ ಪಕ್ಕದ ಹೆದ್ದಾರಿಗೆ ಹಾರಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು (Road Accident) ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.
ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್ ಅನ್ನು ತೆರವುಗೊಳಿಸುತ್ತಿದ್ದಾರೆ.