ಇಂದಿನಿಂದ ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಲಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ನೀಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ಈ ಮಧ್ಯೆ, ಮುಂದಿನ ನಾಲ್ಕು ದಿನಗಳವರೆಗೆ ಮತ್ತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.
ಇನ್ನು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಗದಗ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಮಧ್ಯೆ, ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮತ್ತು ನಾಳೆ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೂಡಾ ಮುನ್ನೆಚ್ಚರಿಕೆ ನೀಡಲಾಗಿದೆ.
ಇನ್ನು ಮುಂದಿನ ನಾಲ್ಕು ದಿನಗಳವರೆಗೆ ಗಾಳಿಯ ಪ್ರಮಾಣ ಹೆಚ್ಚಾಗಿ ಇರಲಿದ್ದು, ತಗ್ಗುಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
Views: 0