ಹಿರಿಯೂರು, ಸೆಪ್ಟೆಂಬರ್, 22: ಮುಂಬೈ ಬಿಟ್ಟರೆ, ಎರಡನೇ ಅತೀ ದೊಡ್ಡದಾಗಿ ಹಿಂದೂ ಮಹಾಗಣಪತಿ ಮೆರವಣಿಗೆ ನಡೆಯುವುದು ಕರ್ನಾಟಕದ ಕೋಟೆನಾಡು ಚಿತ್ರದುರ್ಗದಲ್ಲಿ. ಇನ್ನೂ ಇಲ್ಲಿ ಇಷ್ಟು ದೊಡ್ಡದಾಗಿ ಕಾರ್ಯಕ್ರಮ ನಡೆದರೂ ಒಂದು ವರ್ಷವೂ ಯಾವುದೇ ಗಲಾಟೆಗಳು ನಡೆದಿಲ್ಲ. ಆದ್ದರಿಂದ ಈ ಬಾರಿಯೂ ಕೂಡ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲಾಗಿದೆ.

ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಈಗಲೂ ಕೂಡ ಮುಂಜಾಗ್ರತಾ ಕ್ರಮವಾಗಿ ಪ್ರಚೋಧನಕಾರಿ ಹೇಳಿಕೆ ನೀಡುವವರಿಗೆ ಜಿಲ್ಲೆಗೆ ಬರಲು ಅವಕಾಶ ಕಲ್ಪಿಸಿಲ್ಲ. ಹಾಗೆಯೇ ವಿಹೆಚ್‌ಪಿ ನಾಯಕ ಶರಣ್ ಪಂಪ್ ವೆಲ್‌ಗೆ ಚಿತ್ರದುರ್ಗ ಜಿಲ್ಲೆಗೆ ಬರದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಇಂದು ಸೆಪ್ಟೆಂಬರ್ 22ರಂದು ಹಿರಿಯೂರು ನಗರದಲ್ಲಿ ಹಿಂದೂ ವಿಶ್ವ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಏರ್ಪಡಿಸಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಈ ವಿಸರ್ಜನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತದ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರು ಭಾಗವಹಿಸಿಬೇಕಿತ್ತು. ಈ ಕಾರ್ಯಕ್ರಮದಲ್ಲಿ ಅವರಿಗೆ ಗಣಪತಿ ವಿಸರ್ಜನೆ ವೇದಿಕೆ ಭಾಷಣ ನಿಗದಿಯಾಗಿತ್ತು .
ವಿಹೆಚ್‌ಪಿ ನಾಯಕ ಶರಣ್ ಪಂಪ್ ವೆಲ್ ಅವರ ವಿರುದ್ಧ ರಾಜ್ಯದ ವಿವಿಧ ಭಾಗಗಳಲ್ಲಿ ದೂರು ದಾಖಲಾಗಿರುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸಿದ್ಧತೆ ಹೇಗಿದೆ?: ಚಿತ್ರದುರ್ಗದಲ್ಲಿ ಹಿಂದೂ ವಿಶ್ವ ಪರಿಷತ್ ಹಾಗೂ ಭಜರಂಗದಳದಿಂದ ಏರ್ಪಡಿಸಿರುವ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಸೆಪ್ಟೆಂಬರ್ 28ರಂದು ನಡೆಯಲಿದೆ. ಈ ಶೋಭಾಯಾತ್ರೆಗೆ ಸುಮಾರು 3 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಹಾಗಾದರೆ ಈ ಬೃಹತ್ ಮೆರವಣಿಗೆ ಎಷ್ಟು ಗಂಟೆಯಿಂದ ಆರಂಭವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮುಂಬೈ ಬಿಟ್ಟರೆ ದೇಶದಲ್ಲಿಯೇ ಎರಡನೇ ಅತೀ ದೊಡ್ಡ ಹಿಂದೂ ಮಹಾಗಣಪತಿ ಮೆರವಣಿಗೆ ನಡೆಯುವುದು ಕೋಟೆನಾಡು ಚಿತ್ರದುರ್ಗದಲ್ಲಿ. ಈ ಬಾರಿಯ ಮೆರವಣಿಗೆ ಸೆಪ್ಟೆಂಬರ್ 28ರಂದು ನಡೆಯಲಿದ್ದು, ಇದಕ್ಕೆ ಲಕ್ಷಾನುಗಟ್ಟಲೇ ಜನರು ಭಾಗವಹಿಸುವ ನಿರೀಕ್ಷೆಯಿದೆ. ಇನ್ನು ಅಂದು ಬೆಳಗ್ಗೆ 11 ಗಂಟೆಗೆ ಮೆರವಣಿಗೆಯು ಆರಂಭ ಆಗಲಿದ್ದು, ಅದೇ ದಿನ ರಾತ್ರಿ 9 ಗಂಟೆಗೆ ಗಣೇಶ ವಿಸರ್ಜನೆ ಮಾಡಲಾಗುತ್ತದೆ.
ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆಗೆ ಜಿಲ್ಲೆ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 3,00,000 ಜನ ಭಾಗವಹಿಸುವ ನಿರೀಕ್ಷೆಯಿದೆ. ಶಾಂತಿ ಹಾಗೂ ಸುವ್ಯವಸ್ಥೆಯಿಂದ ಮೆರವಣಗೆ ನಡೆಯಲು ಅನುವಾಗುವಂತೆ ಪೊಲೀಸ್ ಇಲಾಖೆಯಿಂದ ಈಗಾಗಲೇ ಸೂಕ್ತ ಬಂದೋಬಸ್ತ್ ಕ್ರಮ ಕೈಗೊಳ್ಳಲಾಗಿದೆ.
ಸಂಘಟಕರು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮೆರವಣಿಗೆಯನ್ನು ಪ್ರಾರಂಭಿಸಿ ರಾತ್ರಿ 9 ಗಂಟೆಯೊಳಗೆ ಮೆರವಣಿಗೆ ಮುಕ್ತಾಯ ಆಗುವಂತೆ ನೋಡಿಕೊಳ್ಳಬೇಕು ಎಂದರು. ನಗರದ ಬಿ.ಡಿ ರಸ್ತೆ ಹಾಗೂ ಹೊಳಲ್ಕೆರೆ ರಸ್ತೆಯಲ್ಲಿ ಸುಗಮವಾಗಿ ಮೆರವಣಿಗೆ ಹಾದು ಹೋಗುವಂತೆ ನಗರಸಭೆಯಿಂದ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಪೊಲೀಸರು ವೀಕ್ಷಣೆಗೆ ಅನುಕೂಲವಾಗುವಂತೆ ವಾಚ್‌ಟವರ್ ನಿರ್ಮಿಸಬೇಕು. ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ರಸ್ತೆಯಲ್ಲಿ ತಗ್ಗು, ಗುಂಡಿಗಳು ಇದ್ದರೇ, ತಕ್ಷಣವೇ ಮುಚ್ಚುವ ಕೆಲಸ ಮಾಡಬೇಕು. ಮೆರವಣಿಗೆ ಸಾಗುವ ರಸ್ತೆ ಹಾಗೂ ಅಸು ಪಾಸಿನ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಸಾರ್ವಜನಿಕರು ಹತ್ತಿ ನಿಲ್ಲದಂತೆ ನಿರ್ಬಂಧ ವಿಧಿಸಬೇಕು. ಮೆರವಣಿಗೆ ವೇಳೆ ಹಠಾತ್ ಅನಾರೋಗ್ಯಕ್ಕೆ ತುತ್ತಾದವರನ್ನು ಆರೈಕೆ ಮಾಡಲು ಮೆರವಣಿಗೆ ಸಾಗುವ ಹಾದಿಯಲ್ಲಿ ಸೇಫ್ ಹೌಸ್‌ಗಳನ್ನು ಗುರುತಿಸಬೇಕು ಎಂದು ಸೂಚನೆ ನೀಡಿದರು.
ಆರೋಗ್ಯ ಇಲಾಖೆಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌ವೊಂದನ್ನು ಮೀಸಲಿರಿಸಿ, ಅಗತ್ಯ ವೈದ್ಯರನ್ನು ನೇಮಿಸಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ 4 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಬೇಕು. ಬೆಸ್ಕಾಂ ಅಧಿಕಾರಿಗಳು ಮೆರವಣಿಗೆ ವೇಳೆ ವಿದ್ಯುತ್ ಅಡಚಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ವಿದ್ಯುತ್ ತಂತಿಗಳನ್ನು ಎತ್ತರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.