ರಾಜ್ಯಕ್ಕೆ ಮುಂಗಾರು ಮಾರುತಗಳು ಪ್ರವೇಶಿಸಿವೆ. ಈ ಹಿನ್ನೆಲೆಯಲ್ಲಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ.
![](https://samagrasuddi.co.in/wp-content/uploads/2024/06/image-14-1024x576.png)
ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಕ್ಕೆ ಭಾನುವಾರ ಮುಂಗಾರು ಮಾರುತಗಳ ಪ್ರವೇಶವಾಗಿದೆ. ಹೀಗಾಗಿ, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?: ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಮುಂತಾದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಉಳಿದಂತೆ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 20 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಲಕ್ಷದ್ವೀಪ ಪ್ರದೇಶ, ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ನೈಋತ್ಯ ಬಂಗಾಳ ಕೊಲ್ಲಿಯ ಮಧ್ಯ ಮತ್ತು ವಾಯುವ್ಯ ಭಾಗಗಳಲ್ಲಿ ಮುಂಗಾರು ಮಾರುತಗಳು ಬೀಸುತ್ತಿವೆ.